

ಶಿವಮೊಗ್ಗ: ಸಂವೇದನಾಶೀಲತೆ, ಕ್ರಿಯಾಶೀಲತೆ ಮತ್ತು ಸಾಹಿತ್ಯದ ಬಗ್ಗೆ ಅರಿವಿಲ್ಲದೆ ಇದ್ದಲ್ಲಿ ಪರಿಪೂರ್ಣ ಪತ್ರಕರ್ತನಾಗಲು ಸಾಧ್ಯವಿಲ್ಲ ಎಂದು ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.
ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್‌ಟ್ರಸ್ಟ್ ಸಹಭಾಗಿತ್ವದಲ್ಲಿ ಶುಕ್ರವಾರ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಪತ್ರಕರ್ತರ ಕೆಲಸ ಅತ್ಯಂತ ಕಠಿಣವಾದದ್ದು. ಕೆಲವೊಮ್ಮೆ ಜೀವದ ಹಂಗು ತೊರೆದು ಕೆಲಸ ಮಾಡುವ ಅನಿವಾರ್ಯತೆ ಇರುತ್ತದೆ. ತಂತ್ರಜ್ಞಾನ ಮುಂದುವರಿದಂತೆ ಜನಪ್ರಿಯತೆಗಾಗಿ ಅಂತರ್ಜಾಲ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಬಿತ್ತರಿಸಲಾಗುತ್ತಿದೆ. ಸುದ್ದಿಯಲ್ಲಿನ ಶೀರ್ಷಿಕೆಗೂ ವಿಷಯಕ್ಕೂ ಸಂಬಂಧವೇ ಇರುವುದಿಲ್ಲ. ಈ ಮೂಲಕ ಭಾಷೆಯನ್ನೇ ಭ್ರಷ್ಟಗೊಳಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್.ರವಿಕುಮಾರ್ ಮಾತನಾಡಿ, ಮಾಧ್ಯಮ ಅಕಾಡೆಮಿ ಎಂದಾಕ್ಷಣ ಯಾವುದೋ ಒಂದು ಪಕ್ಷದ ಪರವಾಗಿರುವವರನ್ನು ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆಂಬ ತಪ್ಪು ಕಲ್ಪನೆ ಇದೆ. ಆದರೆ ಮಾಧ್ಯಮ ಅಕಾಡೆಮಿ ರಾಜಕೀಯ ಪ್ರೇರಿತವಾಗಿಲ್ಲ ಎಂದು ತಿಳಿಸಿದರು.
ಅಭಿನಂದನೆ ಸ್ವೀಕರಿಸಿ ಅಕಾಡೆಮಿ ಸದಸ್ಯ ಗೋಪಾಲ್ ಯಡಗೆರೆ ಮತ್ತು ಕೆ.ವಿ.ಶಿವಕುಮಾರ್ ಮಾತನಾಡಿದರು. ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ನೇರಿಗೆ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈದ್ಯ ಇತರರಿದ್ದರು.