

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ಕದಂಬ ಕನ್ನಡ ವೇದಿಕೆ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಡವರೇ ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆಗೆಂದು ತೆರಳುವ ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆಯ ಗೂಡಾಗಿದೆ. ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷೃ ತೋರುತ್ತಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರು, ತರಬೇತಿ ಹಂತದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳು ಯಾರಿಗೂ ಉತ್ತರದಾಯಿಗಳಲ್ಲ. ಇವರಲ್ಲಿ ಬಹುತೇಕರು ಬೇಜವಾಬ್ದಾರಿ ತೋರುತ್ತಿದ್ದಾರೆ ಎಂದು ದೂರಿದರು.
ಸಾರ್ವಜನಿಕರು ಮೆಗ್ಗಾನ್‌ನಲ್ಲಿ ಚಿಕಿತ್ಸೆ ಪಡೆಯಲು ಹಿಂದೇಟು ಹಾಕುವ ಸ್ಥಿತಿಯಿದೆ. ಇಲ್ಲಿ ಮೂಲಸೌಕರ್ಯಗಳ ಕೊರತೆಯೂ ಇದೆ. ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕದಂಬ ಕನ್ನಡ ವೇದಿಕೆ ರಾಜ್ಯಾಧ್ಯಕ್ಷ ವಿಶ್ವನಾಥಗೌಡ, ಪ್ರಮುಖರಾದ ಲಕ್ಷ್ಮೀಶ, ನವೀನ್, ಶಿವಣ್ಣ, ಸತೀಶ್, ಸಂತೋಷ್, ಮಂಜುನಾಯ್ಕ, ಗಂಗಾಧರ ಮುಂತಾದವರಿದ್ದರು.