

ಚಿಕ್ಕಬಳ್ಳಾಪುರ : ಕಾರ್ಮಿಕರು ಕೆಲಸದ ವೇಳೆ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೈರಪ್ಪ ಶಿವಲಿಂಗ ನಾಯಿಕ ಸಲಹೆ ನೀಡಿದರು.
ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮಂಗಳವಾರ ಆಯೋಜಿಸಿದ್ದ ಕಾರ್ಮಿಕರಿಗೆ ಸವಲತ್ತು ವಿತರಣೆ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ಸವಲತ್ತುಗಳನ್ನು ಅರ್ಹರು ಸದ್ವಿನಿಯೋಗಪಡಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಸಮರ್ಪಕ ಮಾಹಿತಿ ಇರುವುದು ಅಗತ್ಯ. ಕಟ್ಟಡ ಕಾರ್ಮಿಕರಿಗೆ 3 ಸಾವಿರ ರೂ ಗಳನ್ನು ಮತ್ತು ಆಹಾರ ಕಿಟ್‌ಗಳನ್ನು ನೀಡಲಾಗುತ್ತದೆ. ಇದು ಕರೊನಾ ಆರ್ಥಿಕ ಸಂಕಷ್ಟದಲ್ಲಿರುವ ಕೂಲಿಕಾರರಿಗೆ ಅನುಕೂಲವಾಗುತ್ತದೆ ಎಂದರು.
ಕಾರ್ಮಿಕರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಕಾಲ ಕಾಲಕ್ಕೆ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಸಮಸ್ಯೆಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಇತ್ತೀಚೆಗೆ ಕರೊನಾ ನಿಯಂತ್ರಣಕ್ಕೆ ಬಂದಿದ್ದರೂ ಸೋಂಕು ಪೂರ್ಣ ಪ್ರಮಾಣದಲ್ಲಿ ದೂರವಾಗಿಲ್ಲ. ಇದಕ್ಕೆ ಉದ್ಯೋಗ ನಿರ್ವಹಣೆ ಜಾಗಗಳಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳುವುದು ಸೇರಿ ಮಾರ್ಗಸೂಚಿ ನಿಯಮಗಳ ಪಾಲನೆಯೊಂದಿಗೆ ಕೆಲಸ ನಿರ್ವಹಿಸಬೇಕೆಂದು ಕಾರ್ಮಿಕರಿಗೆ ತಿಳಿಸಿದರು.
ಪ್ರಸ್ತುತ ಜಿಲ್ಲೆಯಲ್ಲಿ ಸುಮಾರು 40 ಸಾವಿರ ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಬಾಕಿ ಇರುವ ಕಾರ್ಮಿಕರಲ್ಲಿ ಅರಿವು ಮೂಡಿಸಿ, ಸವಲತ್ತುಗಳನ್ನು ತಲುಪಿಸಬೇಕು ಎಂದರು.ಜಿಲ್ಲಾ ಕಾರ್ಮಿಕ ಅಧಿಕಾರಿ ಆರ್.ವರಲಕ್ಷ್ಮೀ ಮಾತನಾಡಿ, ಕಟ್ಟಡ ಕಾರ್ಮಿಕರು ಶ್ರಮಜೀವಿಗಳು. ಕಟ್ಟಡ ಮತ್ತು ಇತರ ನಿರ್ಮಾಣ ಸೇರಿ ಕಠಿಣ ಕಾಮಗಾರಿಗಳನ್ನು ಕೈಗೊಳ್ಳುತ್ತಾರೆ. ಇದಕ್ಕೆ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಮಿಕ ಇಲಾಖೆಯ ನಿರೀಕ್ಷಕಿ ಮಂಜುಳಾ ಮತ್ತಿತರರು ಇದ್ದರು.
ನಾನಾ ಕಿಟ್‌ಗಳ ವಿತರಣೆ : ಕರೊನಾ ಸಂಕಷ್ಟದಲ್ಲಿರುವ ನೋಂದಾಯಿತ ಕಟ್ಟಡ ಮತ್ತು ವಲಸೆ ಕಾರ್ಮಿಕರ ಪೈಕಿ 20 ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಮತ್ತು ನೈರ್ಮಲ್ಯ ಕಿಟ್‌ಗಳನ್ನು, 5 ಜನರಿಗೆ ಬಾರ್ ಬೆಂಡಿಂಗ್ ಕಿಟ್, 7 ಜನರಿಗೆ ಪೈಟಿಂಗ್ ಕಿಟ್‌ಗಳನ್ನು ವಿತರಿಸಲಾಯಿತು.