20ರಿಂದ ದೇವರಾಜ ಅರಸು ಜನ್ಮದಿನಾಚರಣೆ: ಡಿಸಿ ಸೆಲ್ವಮಣಿ

DC Dr. R. Selva mani (4)
Published on

ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲೆಯ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಆ.20ರಿಂದ 22ರ ವರೆಗೆ ಡಿ.ದೇವರಾಜ ಅರಸು ಅವರ 107ನೇ ಜನ್ಮದಿನವನ್ನು ಕುವೆಂಪು ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗವುದು ಎಂದು ಡಿಸಿ ಡಾ. ಆರ್.ಸೆಲ್ವಮಣಿ ಹೇಳಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕುರಿತು ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಮೂರು ದಿನ ಸಭಾ ಕಾರ್ಯಕ್ರಮದೊಂದಿಗೆ ಪ್ರದರ್ಶನ ಮಳಿಗೆ, ಇತರೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು. ಅರಸು ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿ, ಸಂಘ-ಸಂಸ್ಥೆಗೆ 50 ಸಾವಿರ ರೂ. ನಗದು, ಸ್ಮರಣಿಕೆಯೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

20ರಂದು ಬೆಳಗ್ಗೆ 11ಕ್ಕೆ ಅರಸು ಅವರ ಜನ್ಮದಿನಾಚರಣೆ, ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ, ಹಿಂದುಳಿದ ವರ್ಗಗಳ ವಿವಿಧ ಕಾಯಕ ಸಮುದಾಯದ ಬಡಗಿ, ನೇಕಾರ, ಕಮ್ಮಾರ, ಕುಂಬಾರ, ವಿಶ್ವಕರ್ಮ ಕುಲಕಸುಬುದಾರರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ, ವಿವಿಧ ಇಲಾಖಾ ಕಾರ್ಯಕ್ರಮಗಳ ಪ್ರಾತ್ಯಕ್ಷಿಕೆ ಮಳಿಗೆ ತೆರೆಯಲಾಗುವುದು ಎಂದರು.

21ರಂದು ಜಿಲ್ಲಾ ಮಟ್ಟದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ಯೋಗ ಮತ್ತು ವಿವಿಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಪ್ರಶಸ್ತಿಪತ್ರ ಹಾಗೂ ಬಹುಮಾನ ವಿತರಿಸಲಾಗುವುದು. 22ರಂದು ಶಾಲಾ ಮಕ್ಕಳಿಗೆ ಅರಣ್ಯದ ಮಹತ್ವ ಕುರಿತು ತಿಳುವಳಿಕೆ, ಗಿಡ ನೆಡುವ ಕಾರ್ಯಕ್ರಮ ಮತ್ತು ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಅಂದು ಸಮಾರೋಪ ಸಮಾರಂಭದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net