

ಭದ್ರಾವತಿ: ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ವಿದ್ಯಾಭ್ಯಾಸ ಪಡೆದು ಉನ್ನತ ಸಾಧನೆ ಮಾಡಬೇಕು ಎಂದು ಸಮಾಜಸೇವಕಿ ಆಶಾರಾಣಿ ಧರ್ಮೇಂದ್ರ ಹೇಳಿದರು.
ಶ್ರೀ ವಿನಾಯಕ ಚಾರಿಟೆಬಲ್ ಟ್ರಸ್ಟ್‌ನಿಂದ ತಾಲೂಕಿನ ಅರಳಿಹಳ್ಳಿ, ಕೂಡ್ಲಿಗೆರೆ, ನಾಗತಿಬೆಳಗಲು ಗ್ರಾಪಂ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್‌ಬುಕ್ ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆ ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ನೀಡಬೇಕು. ಆಗ ಸಮಾಜದಲ್ಲಿ ಗೌರವ, ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ತಿಳಿಸಿದರು.
ಟ್ರಸ್ಟ್ ಅಧ್ಯಕ್ಷ ಎ.ಧರ್ಮೇಂದ್ರ ಮಾತನಾಡಿ, ಸರ್ಕಾರಿ ಶಾಲೆ ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂಬುದು ನನ್ನ ಆಶಯ. ಇದಕ್ಕೆ ಪೂರಕವಾಗಿ ಮಕ್ಕಳ ಶಿಕ್ಷಣಕ್ಕೆ ನೆರವಾಗಲು 8 ವರ್ಷದಿಂದ ಉಚಿತವಾಗಿ ನೋಟ್‌ಬುಕ್ ವಿತರಿಸಲಾಗುತ್ತಿದೆ ಎಂದರು. ಬಿಇಒ ಎ.ಕೆ.ನಾಗೇಂದ್ರ, ಬಗರ್‌ಹುಕುಂ ತಾಲೂಕು ಸಮಿತಿ ಅಧ್ಯಕ್ಷ ಎಸ್.ಮಣಿಶೇಖರ್, ಅರಳಿಹಳ್ಳಿ ಶಾಲೆ ಪ್ರಭಾರ ಮುಖ್ಯಶಿಕ್ಷಕ ದಿವಾಕರ್ ಇತರರಿದ್ದರು.