

ಸೊರಬ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಪಾಲಕರು ಸರ್ಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ ಹೇಳಿದರು.
ಪಟ್ಟಣದ ಕಾನಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದದ ಚಿಣ್ಣರ ಹಬ್ಬ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಕಲಿಕೆ ಗುಣಮಟ್ಟ ಹೆಚ್ಚಿಸುವ ಜತೆಗೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿ ಮೌಲ್ಯಯುತ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಸಮಾಜ ಸೇವಕ ರಾಜು ಹಿರಿಯಾವಲಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಕಲಿಕೆ ಸಮನ್ವಯದ ಜತೆಗೆ ಪೂರಕವಾದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದರು.
ಶಾಲೆಗೆ ಕೊಡುಗೆ ನೀಡಿದ ಪಾಲಕರನ್ನು ಅಭಿನಂದಿಸಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣಪತಿ, ಸಮೂಹ ಸಂಪನ್ಮೂಲ ವ್ಯಕ್ತಿ ಸುಧಾ, ಎಸ್‌ಡಿಎಂಸಿ ಅಧ್ಯಕ್ಷ ಸಂದೇಶ್, ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವಿಕ್ರಮ್, ಷಣ್ಮುಖಾಚಾರ್, ಭಾಗ್ಯ ಜ್ಯೋತಿ, ಕಾವ್ಯಾ, ತುಳಸಿ, ಸಂಜೀವ್‌ಕುಮಾರ್ ಇತರರಿದ್ದರು.