

ಸೊರಬ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಪಕ್ಷದ ಸಂಘಟನೆ ಸದೃಢಗೊಳಿಸಲು ಮತ್ತೊಮ್ಮೆ ಸದಸ್ಯತ್ವ ನೋಂದಣಿ ಅಭಿಯಾನ ಆರಂಭಿಸಲಾಗುವುದು ಎಂದು ಜೆಡಿಎಸ್ ಮುಖಂಡ ಬಾಸೂರು ಚಂದ್ರೇಗೌಡ ಹೇಳಿದರು.
ಪಟ್ಟಣದಲ್ಲಿ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಜೆಡಿಎಸ್ ಪ್ರಬಲವಾಗಿದೆ. ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಸಕ್ರಿಯ ಕಾರ್ಯಕರ್ತರನ್ನು ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿ ಕುಂಠಿತಗೊಂಡಿದೆ. ಸ್ಥಳೀಯ ಶಾಸಕರು ನಿರ್ಲಕ್ಷೃ ವಹಿಸಿದ್ದಾರೆ. ಒಂದು ಕುಟುಂಬಕ್ಕೆ 40 ವರ್ಷ ಅಧಿಕಾರ ನೀಡಿದ್ದರೂ ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ಸೋತಿದ್ದಾರೆ. ಶಾಸಕರ ವೈಫಲ್ಯ ಬಹಿರಂಗವಾಗಿದೆ ಎಂದರು.
ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಗಣಪತಿ ಟಿ.ಜಿ.ಕೊಪ್ಪ ಮಾತನಾಡಿ, ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ವರ್ಷದ ಹಿಂದೆ ಚಾಲನೆ ನೀಡಲಾಗಿತ್ತು. ಈಗಾಗಲೇ 1,500 ಸದಸ್ಯತ್ವ ನೋಂದಣಿ ಮಾಡಲಾಗಿದೆ. ಗರಿಷ್ಟ 5,000 ಹೆಚ್ಚುವರಿ ಸದಸ್ಯತ್ವ ನೋಂದಣಿ ಮಾಡುವ ಗುರಿ ಹೊಂದಲಾಗಿದೆ. ಪಕ್ಷದಲ್ಲಿದ್ದ ಭಿನ್ನಾಭಿಪ್ರಾಯಗಳಿಲ್ಲ. ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅಧಿಕಾರ ದೊರಕಿಸುವ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು ಎಂದು ಎಂದರು. ತಾಲೂಕು ಸಂಘಟನಾ ಕಾರ್ಯದರ್ಶಿ ರಾಮಪ್ಪ ಕೊಡಕಣಿ, ಕಾರ್ಯದರ್ಶಿ ಗಣೇಶ್, ವಕೀಲ ಬಸವನಗೌಡ ಪಾಟೀಲ್, ನಾಗಪ್ಪ, ಶಿವಮೂರ್ತಿ ಮನೆಮನೆ, ಕುಮಾರ್, ದಿಗಂಬರ, ರವಿ ಇತರರಿದ್ದರು.