

ತೀರ್ಥಹಳ್ಳಿ: ಇತ್ತೀಚಿನ ದಿನಗಳಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಜಿಪಂ ಸಿಇಒ ಎನ್.ಹೇಮಂತ್ ಹೇಳಿದರು.
ಗ್ರಾಮೀಣ ಸೌಧದಲ್ಲಿ ಏರ್ಪಡಿಸಿದ್ದ ಮಿಷನ್ ಸುರಕ್ಷಾ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ 140 ಇದ್ದು ಬಾಲ್ಯವಿವಾಹ, ಪೋಕ್ಸೋ ಪ್ರಕರಣಗಳಿಗೆ ಇಂತಹ ಮಕ್ಕಳು ಸಿಲುಕುವ ಸಾಧ್ಯತೆ ಹೆಚ್ಚಿದೆ. ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿಯುವ ಮಕ್ಕಳ ಬಗ್ಗೆ ತೀವ್ರ ನಿಗಾ ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಎರಡು ಬಾಲ್ಯವಿವಾಹ ತಡೆಯಲಾಗಿದೆ. ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲಿಸಿ ಕೇಂದ್ರ ಪುರಸ್ಕೃತ ಯೋಜನೆಯಿಂದ 4000 ರೂ. ಭತ್ಯೆ ಒದಗಿಸಬೇಕು. 95 ಮನೆಗಳಲ್ಲಿ ಶೌಚಗೃಹ ಇಲ್ಲದಿರುವ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದು ಈ ಮನೆಗಳಿಗೆ ತೆರಳಿ ಶೌಚಗೃಹ ನಿರ್ಮಾಣದ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಭಾರತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್.ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್, ತಹಸೀಲ್ದಾರ್ ಎಸ್.ರಂಜಿತ್, ತಾಪಂ ಇಒ ಎಂ.ಶೈಲಾ ಇತರರಿದ್ದರು.