

ತೀರ್ಥಹಳ್ಳಿ: ನೈತಿಕ ಶಿಕ್ಷಣದ ಕೊರತೆಯಿಂದ ವಿದ್ಯಾರ್ಥಿಗಳು ಹಾದಿ ತಪ್ಪುತ್ತಿದ್ದಾರೆ. ಪರಿಣಾಮವಾಗಿ ಸಮಾಜದಲ್ಲಿ ನೈತಿಕ ಅಧಃಪತನದತ್ತ ಸಾಗುತ್ತಿರುವುದು ಆತಂಕಕಾರಿ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಆತಂಕ ವ್ಯಕ್ತಪಡಿಸಿದರು.
ಪಟ್ಟಣದ ಗಾಯತ್ರಿ ಮಂದಿರದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಸುರಕ್ಷೆ ದೃಷ್ಟಿಯಿಂದ ಶಿಕ್ಷಕರು, ಪಾಲಕರು ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ತಿಳಿಸಿದರು.
ಸಂವಿಧಾನದ ಮೂಲ ಆಶಯಗಳನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವ ರಾಜ್ಯ ಸರ್ಕಾರದ ಆದೇಶ ಅರ್ಥಪೂರ್ಣ. ಇಂಗ್ಲಿಷ್ ಭಾಷೆಗೆ ಆದ್ಯತೆ ನೀಡುವ ಭರಾಟೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಬಾರದು. ಕವಿ ಕುವೆಂಪು ಅವರಂತಹ ಮಹಾನ್ ವ್ಯಕ್ತಿಗಳು ಜನಿಸಿರುವ ಪುಣ್ಯಭೂಮಿಯ ಶೈಕ್ಷಣಿಕ ಸಾಧನೆ ಪ್ರಶಂಸನೀಯ.
ಆರ್.ಎಂ.ಮಂಜುನಾಥ ಗೌಡ
ಎಂಎಡಿಬಿ ಅಧ್ಯಕ್ಷ
ವಿದ್ಯಾರ್ಥಿಗಳಿಗೆ ಅಂಕ ಗಳಿಕೆಗೆ ಆದ್ಯತೆ ನೀಡುವ ಜತೆಯಲ್ಲಿ ನೈತಿಕ ಶಿಕ್ಷಣಕ್ಕೂ ಹೆಚ್ಚು ಒತ್ತು ನೀಡಬೇಕು. ಸಂಸ್ಕೃತಿ, ಸಂಪ್ರದಾಯಗಳ ಮಹತ್ವ ತಿಳಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.
ತಾಲೂಕು ಮತ್ತು ಹೋಬಳಿ ಮಟ್ಟದ ಆಯ್ದ ಉತ್ತಮ ಶಿಕ್ಷಕರು, ನಿವೃತ್ತರಾದ 25 ಶಿಕ್ಷಕರನ್ನು ಗೌರವಿಸಲಾಯಿತು. ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ನಾಬಳ ಶಚ್ಚೀಂದ್ರ ಹೆಗ್ಡೆ, ತಹಸೀಲ್ದಾರ್ ಎಸ್.ರಂಜಿತ್, ತಾಪಂ ಇಒ ಎಂ.ಶೈಲಾ, ಬಿಇಒ ವೈ.ಗಣೇಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಘವೇಂದ್ರ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಪ್ರವೀಣ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಮಹಾಬಲೇಶ್ವರ ಹೆಗ್ಡೆ, ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಪ್ಪ ಇತರರಿದ್ದರು.