

ಬೆಳಗಾವಿ: ಇಂದಿನ ವಿಧಾನಸಭಾ ಅಧಿವೇಶನದಲ್ಲಿ ಶೃಂಗೇರಿ ಶಾಸಕ ರಾಜೇಗೌಡ ಮಾತಿಗೆ ದನಿಗೂಡಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶೃಂಗೇರಿಗೆ ಅನುದಾನ ನೀಡುವಾಗ ಜೀವರಾಜ್ ಹೆಸರು ಉಲ್ಲೇಖಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
'ಸೋತ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಒಂದು ಕೆಟ್ಟ ಸಂಪ್ರದಾಯ. ಅದು ಯಾವುದೇ ಪಕ್ಷದ ಅಭ್ಯರ್ಥಿಯಾಗಿರಲಿ. ಬಜೆಟ್‌ಗೆ ಅನುಮೋದನೆ ನೀಡುವವರು ಯಾರು? ಚುನಾವಣೆಯಲ್ಲಿ ಸೋತವರು ಬಂದು ಚರ್ಚಿಸಿ ಬಜೆಟ್ ಪಾಸ್ ಮಾಡಿ ಕೊಡುತ್ತಾರಾ? ಸೋತವರ ಹೆಸರಿಗೆ ಅನುದಾನ ಕೊಟ್ಟು ನೀವು ಜನರ ಜೊತೆ ಹೋಗಿ ಕೆಲಸ ಮಾಡಿ ಎನ್ನುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಇದನ್ನು ಪ್ರತಿಷ್ಠೆ ಮಾಡಿಕೊಳ್ಳಬಾರದು, ಇದು ಮುಂದುವರೆಯಲೂಬಾರದು. ಸೋತವರು ಮತ್ತೆ ಗೆದ್ದು ಬಂದು ಜನರ ಜೊತೆ ನಿಂತು ಕೆಲಸ ಮಾಡಲಿ. ನಾನು ಮುಖ್ಯಮಂತ್ರಿಯಾಗಿ ಇರುವಾಗ ಈ ರೀತಿ ಸೋತವರಿಗೆ ಅನುದಾನ ನೀಡಿದ್ದ ನೆನಪಿಲ್ಲ.
ನಿಮ್ಮ ಕ್ಷೇತ್ರದಲ್ಲಿ ಭೀಮಣ್ಣ ನಾಯ್ಕ್ ಅವರಿಗೆ ಹಿಂದೆ ನಾನು ಅನುದಾನ ನೀಡಿದ್ದೆನಾ ಎಂದು ಸ್ಪೀಕರ್ ಅವರನ್ನೇ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ಸಂಸದೀಯ ವ್ಯವಸ್ಥೆಯಲ್ಲಿ ಈ ರೀತಿ ನಡವಳಿಕೆಗೆ ಅವಕಾಶ ಇಲ್ಲ. ಇದು ರಾಜೇಗೌಡರಿಗೆ ಮಾತ್ರವಲ್ಲ, ಯು.ಟಿ ಖಾದರ್ ಸೇರಿದಂತೆ ಬಹಳಷ್ಟು ಜನರಿಗೆ ಈ ರೀತಿ ಅನ್ಯಾಯ ಆಗಿದೆ. ಮಾಧುಸ್ವಾಮಿ ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದೆ ಎಂದು ನಾನು ಭಾವಿಸಿದ್ದೇನೆ. ಅವರು ಹಿರಿಯ ಸದಸ್ಯರು ಕೂಡ ಹೌದು. ಇದನ್ನು ಪ್ರಿವಿಲೇಜ್ ಕಮಿಟಿಗೆ ಕಳಿಸುವ ಬದಲು ಇನ್ನು ಮುಂದೆ ಈ ತಪ್ಪು ಆಗುವುದಿಲ್ಲ ಎಂದು ಸರ್ಕಾರ ಹೇಳಲಿ. ಈಗಾಗಲೇ ಸೋತ ಅಭ್ಯರ್ಥಿಗಳ ಹೆಸರಿನಲ್ಲಿ ನೀಡಿರುವ ಅನುದಾನವನ್ನು ವಾಪಾಸು ಪಡೆಯಿರಿ. ನೀವು ಅನುದಾನ ನೀಡುತ್ತೀರಿ ಎಂಬ ನಿರೀಕ್ಷೆ ಕೂಡ ನಮಗೆ ಇಲ್ಲ. ನೀವು ಅನುದಾನವನ್ನೇ ಕೊಡದಿದ್ದರೂ ಪರವಾಗಿಲ್ಲ ಆದರೆ ಈ ರೀತಿ ಶಾಸಕರಿಗೆ ಅಗೌರವ ಮಾಡಬೇಡಿ. ಶಾಸಕರ ಹಕ್ಕುಗಳನ್ನು ರಕ್ಷಣೆ ಮಾಡುವುದು ಸಭಾಧ್ಯಕ್ಷರ ಕರ್ತವ್ಯ. ಹಿಂದೆ ಹೀಗೆ ಆಗಿತ್ತು ಎಂದು ಹೇಳುವುದು ಸರಿಯಲ್ಲ, ಇದೊಂದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಈ ಸಂಪ್ರದಾಯ ಇಲ್ಲಿಗೆ ಕೊನೆಯಾಗಬೇಕು.
ಹಾಲಿ ಶಾಸಕರಿಗೆ 100 ಕೋಟಿ ಅನುದಾನ ಕೊಟ್ಟು, ಅದೇ ಕ್ಷೇತ್ರದಲ್ಲಿ ಸೋತ ಅಭ್ಯರ್ಥಿಗೆ ಇನ್ನು 100 ಕೋಟಿ ಅನುದಾನ ಬಿಡುಗಡೆ ಮಾಡಲು ಅವಕಾಶ ಇದೆಯಾ? ಸೋತ ಅಭ್ಯರ್ಥಿ ಬಂದು ಬಿಲ್ ಮೇಲೆ ಚರ್ಚೆ ಮಾಡುತ್ತಾರ? ಬಜೆಟ್ ಅನ್ನು ಪಾಸ್ ಮಾಡಿ ಕೊಡುತ್ತಾರ? ಮಾಡಿಕೊಡೋಕೆ ಬರೋದಾದರೆ ಸರ್ಕಾರ ಅವರಿಂದಲೇ ಬಜೆಟ್ ಗೆ ಅನುಮೋದನೆ ಪಡೆಯಲಿ' ಎಂದು ಹೇಳಿರುವ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋತ ಅಭ್ಯರ್ಥಿಗಳ ಹೆಸರಲ್ಲಿ ಅನುದಾನ ಬಿಡುಗಡೆ ಮಾಡಿದ್ದ ಬಿಜೆಪಿ ಸರ್ಕಾರವನ್ನು ವಿರೋಧಿಸಿದ್ದಾರೆ.