

ಬೆಂಗಳೂರು: ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ(CM) ಅಷ್ಟೂ ದಿನ ಅವರೇ ಸಿಎಂ. ಮುಂದೆಯೂ ಅವರೇ ಇರಬಹುದು. ಅವರು ನಮ್ಮ ನಾಯಕರು. ಅವರ ನಾಯಕತ್ವದಲ್ಲಿ ಪಕ್ಷ ಸಂಘಟಿಸಿ, ಪಕ್ಷ ಕಟ್ಟುತ್ತಿದ್ದೇವೆ ಎಂದು ಮಾಜಿ ಸಂಸದ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು.
ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ನಾಯಕತ್ವ ಬದಲಾವಣೆ, ಅಧಿಕಾರ ಹಸ್ತಾಂತರ ವಿಚಾರವಾಗಿ ನಡೆಯುತ್ತಿರುವ ಚರ್ಚೆ ಬಗ್ಗೆ ಕೇಳಿದಾಗ, “ಇದೆಲ್ಲವೂ ಊಹಾಪೋಹ. ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ವಿಚಾರಗಳು ಪಕ್ಷದ ಮುಂದೆ ಇಲ್ಲ. ಸಿದ್ದರಾಮಯ್ಯ ಅವರಿಗೆ ಇನ್ನು ವಯಸ್ಸಾಗಿಲ್ಲ. ಮುಂದಿನ ದಿನಗಳಲ್ಲಿ ಬರುವ ಎಲ್ಲಾ ಚುನಾವಣೆಗಳು ಅವರ ನೇತೃತ್ವದಲ್ಲೇ ನಡೆಯಲಿವೆ ಎಂದರು.
ಡಿಸಿಎಂ ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ಮೇಕೆದಾಟು ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ಗುರುವಾರ (ಡಿ.6) ವಿಚಾರಣೆ ನಡೆಯಲಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳು ವಿಶೇಷ ಪೀಠ ರಚಿಸಿರುವಂತೆ ಕಾಣಿಸುತ್ತದೆ. ಈ ವಿಚಾರಣೆ ವೇಳೆ ನಮ್ಮ ನಿಲುವು ಏನಿರಬೇಕು ಎಂಬುದರ ಬಗ್ಗೆ ಅಧಿಕಾರಿಗಳು ಮತ್ತು ವಕೀಲರ ಜೊತೆ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ” ಎಂದರು.
“ವರಿಷ್ಠರು ದೆಹಲಿಯಲ್ಲಿ ಇರದೇ ಎಲ್ಲಿ ಹೋಗುತ್ತಾರೆ. ಬಿಹಾರ ಚುನಾವಣೆಗೂ ಇದಕ್ಕೂ ಸಂಬಂಧ ವಿಲ್ಲ. ಶಿವಕುಮಾರ್ ಅವರು ಈ ಹಿಂದಿನಿಂದಲೂ ದೆಹಲಿಗೆ ಹೋದಾಗೆಲ್ಲಾ ಕಾಂಗ್ರೆಸ್ ಕಚೇರಿಗೆ ಹೋಗುತ್ತಾರೆ, ವರಿಷ್ಠರು ಸಿಕ್ಕರೆ ಮಾತನಾಡುತ್ತಾರೆ, ಬರುತ್ತಾರೆ. ತುರ್ತಾಗಿ ಮೇಕೆದಾಟು ಪ್ರಕರಣ ವಿಚಾರಣೆಗೆ ಬಂದಿದೆ. ವಿಶೇಷ ಪೀಠ ರಚನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಈ ಪೀಠ ರಚನೆಯಿಂದ ಯಾವ ರೀತಿ ಲಾಭ ಆಗಲಿದೆ, ನಮ್ಮ ನಿಲುವು ಹೇಗಿರಬೇಕು ಎಂದು ಚರ್ಚೆ ಮಾಡಲು ತೆರಳಿದ್ದಾರೆ. ನಾಳೆ ಹೆಚ್ಚು ಕಮ್ಮಿ ಆದರೆ ಯಾಕೆ ಸರಿಯಾಗಿ ನಿಭಾಯಿಸಲಿಲ್ಲ ಎಂದು ನೀವುಗಳೇ ಪ್ರಶ್ನೆ ಮಾಡುತ್ತೀರಿ. ಇದು ರಾಜಕೀಯ ಕೆಲಸ ಅಲ್ಲ. ಕರ್ನಾಟಕ ರಾಜ್ಯದ ಹಿತ ಕಾಪಾಡುವ ಕೆಲಸ” ಎಂದರು.
ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎಂದು ಅಭಿಮಾನಿಗಳು ಸಂಕಲ್ಪ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಅಭಿಮಾನಿಗಳು ಈ ರೀತಿ ಆಸೆ ಪಡುವುದು ಸಹಜ ಪ್ರಕ್ರಿಯೆ. ಅಭಿಮಾನಿಗಳು ತಮ್ಮ ನಾಯಕರು ಸಿಎಂ ಆಗಬೇಕು ಎಂದು ಬಯಸುತ್ತಾರೆ. ಇದು ನಿರಂತರ ಪ್ರಕ್ರಿಯೆ. ಕೆಲವರು ಕುಮಾರಸ್ವಾಮಿ ಆಗಬೇಕು ಅಂತಾರೆ, ಮತ್ತೆ ಕೆಲವರು ವಿಜಯೇಂದ್ರ ಆಗಬೇಕು ಅಂತಾರೆ, ಮತ್ತೆ ಕೆಲವರು, ಅಶ್ವತ್ಥ್ ನಾರಾಯಣ, ಅಶೋಕ್, ಪರಮೇಶ್ವರ್, ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು ಅಂತಾ ಬಯಸುತ್ತಾರೆ. ಆಯಾ ಊರಿನಲ್ಲಿ ಅವರ ನಾಯಕರು ಆಗಬೇಕು ಎಂದು ಬಯಸುತ್ತಾರೆ. ಮತ್ತೆ ಕೆಲವರು ವೇದಿಕೆ ಮೇಲೆ ನಾಲ್ಕು ಒಳ್ಳೆ ಮಾತುಗಳನ್ನು ಆಡಿ ತಮ್ಮ ಅಭಿಮಾನ ತೋರಿಸುತ್ತಾರೆ. ಇದೆಲ್ಲವು ರಾಜಕಾರಣದ ಭಾಗ. ಇದರ ಬಗ್ಗೆ ದೊಡ್ಡ ಚರ್ಚೆ ಅಗತ್ಯವಿಲ್ಲ. ಈ ಬಗ್ಗೆ ಪಕ್ಷ ಹೈಕಮಾಂಡ್ ಹಂತದಲ್ಲಿ ತೀರ್ಮಾನ ಮಾಡಲಾಗುವುದು” ಎಂದರು.