

ಬೆಂಗಳೂರು: ಜನಾಕ್ರೋಶ ಯಾತ್ರೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.ಯಾತ್ರೆ ಹಮ್ಮಿಕೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ ಎಂದು ಸಿಎಂ ಕಾಲೆಳೆದಿದ್ದಾರೆ.
ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ ಎಂದಿದ್ದಾರೆ.
ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಬಿ.ವೈ. ವಿಜಯೇಂದ್ರ ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಶಾಸಕ ಮಿತ್ರರು ಕಳೆದ ಎರಡು ವರ್ಷಗಳಿಂದ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ದಮ್ಮು ತಾಕತ್ ತೋರಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಜೆಟ್‌ನ 51,000 ಕೋಟಿ ರೂಪಾಯಿ ಹಣ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದ್ದು, ಅವರೆಲ್ಲರೂ ಸಂತುಷ್ಟರಾಗಿದ್ದಾರೆ. ಈಗ ಅವರು ಬೀದಿಗೆ ಬಂದು ನಮ್ಮ ಪರ ಘೋಷಣೆ ಹಾಕದೆ ಇರಬಹುದು, ಆದರೆ ಅವರೆಲ್ಲರ ಆಶೀರ್ವಾದ ನಮ್ಮ ಸರ್ಕಾರದ ಪರವಾಗಿದೆ.
ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಭಾರತೀಯ ಜನತಾ ಪಕ್ಷದ ಬಡವರು ಮತ್ತು ಮಹಿಳಾ ವಿರೋಧಿ ಧೋರಣೆಯನ್ನು ಅರ್ಥಮಾಡಿಕೊಳ್ಳುವಷ್ಟು ಜನ ಪ್ರಜ್ಞಾವಂತರಾಗಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕದ ಜನರ ಹಿತರಕ್ಷಣೆಯ ಕಿಂಚಿತ್ತಾದರೂ ಕಾಳಜಿ ಈ ಬಿಜೆಪಿ ನಾಯಕರಿಗೆ ಇರುವುದಾದರೆ ಮೊದಲು ಇವರು ಪ್ರಧಾನಮಂತ್ರಿ ನಿವಾಸದ ಎದುರು ಹೋಗಿ ಪ್ರತಿಭಟನೆ ನಡೆಸಬೇಕು ಎಂದು ಸಿಎಂ ತಿವಿದಿದ್ದಾರೆ.
ವೈಯಕ್ತಿಕವಾಗಿ ನಾನು ರಾಜ್ಯದಲ್ಲಿ ರಚನಾತ್ಮಕವಾಗಿ ಕಾರ್ಯನಿರ್ವಹಿಸುವ ಸಮರ್ಥ ವಿರೋಧ ಪಕ್ಷ ಇರಬೇಕೆಂದು ಬಯಸುವವನು. ಬಿಜೆಪಿಯವರಂತೆ ರಾಜ್ಯ ಬಿಜೆಪಿ ಮುಕ್ತ ಆಗಬೇಕೆಂದು ಬಯಸುವಷ್ಟು ಕೆಟ್ಟ ಮನಸ್ಸು ನನಗಿಲ್ಲ ಎಂದು ಸಿಎಂ ಹೇಳಿದ್ದಾರೆ.
ನಮ್ಮ ಆಡಳಿತದಲ್ಲಿ ತಿಳಿದೋ, ತಿಳಿಯದೆಯೋ ತಪ್ಪುಗಳಾಗಿದ್ದರೆ ಅದನ್ನು ನಮ್ಮ ಗಮನಕ್ಕೆ ತರುವುದು ವಿರೋಧ ಪಕ್ಷದ ಮುಖ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿರುವ ವಿರೋಧ ಪಕ್ಷ ತನ್ನ ಒಳಜಗಳ ಮತ್ತು ಅಸಾಮರ್ಥ್ಯದಿಂದ ರಾಜ್ಯದ ಜನತೆ ಎದುರು ನಗೆಪಾಟಲಿಗೀಡಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.