

ಕಾರವಾರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತದ ವೈಫಲ್ಯ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು, ಜಿ.ಪರಮೇಶ್ವರ್ ಅವರು ಅಧಿಕಾರಕ್ಕೆ ಬರಲಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.
ಪೆಟ್ರೋಲ್ ದರ ಏರಿಕೆ ವಿರುದ್ಧ ಶಿರಸಿ ನಗರದ ಅಂಚೆ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅಲ್ಪಸಂಖ್ಯಾತರ ಓಲೈಕೆಗೆ, ಮತಗಳಿಕೆಗೆ ನಿಮ್ಮದೇ ರಾಜಕಾರಣ ಮಾಡುತ್ತಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಜನರಲ್ಲಿ ಭ್ರಮನಿರಸನ ಉಂಟು ಮಾಡಿದೆ. ಹೀಗಾಗಿ ಯೋಗ್ಯರಾಗಿರುವ ಪರಮೇಶ್ವರ್ ಅವರು ಅಧಿಕಾರಕ್ಕೆ ಬರಲಿ ಎಂದು ಒತ್ತಾಯಿಸಿದರು.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ಹೆಚ್ಚು ಸ್ಥಾನಗಳನ್ನು ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಆಡಳಿತ ನಡೆಸಲು ಅಸಮರ್ಥರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜನರು ಕಾಂಗ್ರೆಸ್ಗೆ 5 ವರ್ಷಗಳ ಅಧಿಕಾರ ನೀಡಿದರಾದರೂ ಕಾಂಗ್ರೆಸ್ ಸರ್ಕಾರವೇ ರಾಜೀನಾಮೆ ನೀಡುವ ಪರಿಸ್ಥಿತಿಯಿದೆ. ತಕ್ಷಣ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ಕೊಡಬೇಕೆಂದು ಹೆಗಡೆ ಆಗ್ರಹಿಸಿದರು.