

ಗೋರಖ್‌ಪುರ: ( car crashes into tree ) ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ವೇಗ ಎಷ್ಟು ಹೆಚ್ಚಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಯಿತು. ಕಾರಿನಲ್ಲಿ 8 ಜನರಿದ್ದರು. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಗಾಯಗೊಂಡರು.
ಮೃತರನ್ನು ಸಹೋದರರಾದ ಹರೇಂದ್ರ ಮದ್ದೇಶಿಯಾ ಮತ್ತು ಯೋಗೇಂದ್ರ ಮದ್ದೇಶಿಯಾ, ರಂಜೀತ್, ಮುಖೇಶ್, ಭೀಮ್ ಲಕ್ಷ್ಮಣ್ ಯಾದವ್ ಮತ್ತು ಕಾರು ಚಾಲಕ ಓಂ ಪ್ರಕಾಶ್ ಎಂದು ಗುರುತಿಸಲಾಗಿದೆ. ಬಲಿಯಾದವರೆಲ್ಲರೂ 25 ರಿಂದ 40 ವರ್ಷ ವಯಸ್ಸಿನವರು.
ಭಾನುವಾರ ರಾತ್ರಿ ಶುಕ್ಲಾ ಭುಜೌಲಿ ಕ್ರಾಸಿಂಗ್‌ನಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದವರು ಮದುವೆಯಲ್ಲಿ ಪಾಲ್ಗೊಳ್ಳಲು ದೇವಗಾಂವ್ ಗ್ರಾಮಕ್ಕೆ ಹೋಗುತ್ತಿದ್ದರು.
ಸ್ಥಳೀಯರ ಸಹಾಯದಿಂದ ಪೊಲೀಸರು ಕಾರಿನಲ್ಲಿದ್ದವರನ್ನು ಆಸ್ಪತ್ರೆಗೆ ಸಾಗಿಸಿದರು.ಅವರಲ್ಲಿ ಆರು ಮಂದಿ ಆಸ್ಪತ್ರೆಗೆ ಬರುವಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದು, ಉಳಿದ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ವಿವರವಾದ ತನಿಖೆ ನಡೆಯುತ್ತಿದೆ ಎಂದು ಕುಶಿನಗರ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಪ್ರಸ್ತುತ, ಪೊಲೀಸರು ಮೃತರ ಶವಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ತ್ವರಿತ ಮತ್ತು ಸಮರ್ಪಕ ಚಿಕಿತ್ಸೆ ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.