ಚರಂಡಿಗೆ ಬಿದ್ದ ಕಾರು; ಒಂದೇ ಕುಟುಂಬದ 6 ಮಂದಿ ಮೃತ! ಇಬ್ಬರು ಮಕ್ಕಳ ಸ್ಥಿತಿ ಗಂಭೀರ

Untitled design (10)
Published on

ಕಾನ್ಪುರ: ಇಂದು ಬೆಳ್ಳಂಬೆಳಗ್ಗೆ ಕಾರು ಅಪಘಾತವೊಂದು ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನೊಳಗೆ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಸಮೇತರಾಗಿ ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಅಪಘಾತ ಉತ್ತರ ಪ್ರದೇಶದ ಕಾನ್ಪುರದ ಸಂದಲ್‌ಪುರ ರಸ್ತೆಯ ಜಗನ್ನಾಥಪುರ ಗ್ರಾಮದ ಬಳಿ ವರದಿಯಾಗಿದೆ.

ವರದಿಗಳ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಪಲ್ಟಿಯಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ. ಸೋಮವಾರ (ಜ. 05) ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಕಾನ್ಪುರ ದೇಹತ್‌ನ ಸಿಕಂದ್ರದ ಸಂದಲ್‌ಪುರ ರಸ್ತೆಯ ಜಗನ್ನಾಥಪುರ ಗ್ರಾಮದ ಬಳಿ ಅನಿಯಂತ್ರಿತ ಚರಂಡಿಗೆ ಸ್ವಿಫ್ಟ್ ಕಾರು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದು, ಕಾರಿನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಘಟನೆ ಬಗ್ಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ, "ಕುಟುಂಬವು ಮಧ್ಯಪ್ರದೇಶ ಫುಲ್ಗಾಂವ್‌ನಿಂದ ಮದುವೆ ಸಮಾರಂಭ ಮುಗಿಸಿಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರು ಮಕ್ಕಳಿಗೆ ಅಗತ್ಯ ಚಿಕಿತ್ಸೆಯನ್ನು ಕೊಡಿಸಲಾಗಿದೆ" ಎಂದು ಹೇಳಿದ್ದಾರೆ,(ಏಜೆನ್ಸೀಸ್),

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net