

ಶಿವಮೊಗ್ಗ: ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ಸೇರಿ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 6,570 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಫಲಾನುಭವಿಗಳ ಇಚ್ಛಾಶಕ್ತಿ ಹಾಗೂ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ ತರಬೇತಿ ನೀಡಲಾಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಹೇಳಿದರು.
ಸೋಮವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವಾರ್ಷಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವನಿಧಿ ಫಲಾನುಭವಿಗಳಿಗೆ ಭವಿಷ್ಯದಲ್ಲಿ ಅವರ ಸಾಮರ್ಥ್ಯಕ್ಕೆ ಅನುಸಾರ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಸಮರ್ಥರನ್ನಾಗಿಸಲು ಪ್ರಾಧಿಕಾರದಿಂದ ಹೊಸ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯ ಕೌಶಲ ಅಭಿವೃದ್ದಿ ನಿಗಮ, ಕೌಶಲಾಭಿವೃದ್ದಿ ಇಲಾಖೆ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮಾರ್ಗಸೂಚಿಯೊಂದಿಗೆ ಯುವನಿಧಿ ಫಲಾನುಭವಿಗಳನ್ನು ಉದ್ಯೋಗಸ್ಥರನ್ನಾಗಿ ಮಾಡಿ ಅವರ ಭವಿಷ್ಯ ರೂಪಿಸಲಾಗುವುದು ಎಂದರು.
ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಜಿಪಂ ಸಿಇಒ ಎನ್.ಹೇಮಂತ್, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.