

ಶಿವಮೊಗ್ಗ: ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯಾದ್ಯಂತ 8ರಿಂದ 12ನೇ ತರಗತಿವರೆಗಿನ ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಕಲಿಕೆಯೊಂದಿಗೆ ಕೌಶಲಾಧಾರಿತ ತರಗತಿ ಆರಂಭಿಸಲಾಗುವುದು ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನಪಾಯ ಇಲಾಖೆ, ಕೌಶಲ ಅಭಿವೃದ್ಧಿ ನಿಗಮ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಆಶ್ರಯದಲ್ಲಿ ಆಯೋಜಿಸಿದ್ದ ಉದ್ಯೋಗಮೇಳ ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದ ಹಂತದಲ್ಲೇ ಕೌಶಲಾಧಾರಿತ ಶಿಕ್ಷಣ ನೀಡುವುದರಿಂದ ಅವರ ಭವಿಷ್ಯದ ಬದುಕು ಉಜ್ವಲವಾಗಲಿದೆ. ಅಲ್ಲದೆ ತಮಗಿಷ್ಟವಾದ ಕ್ಷೇತ್ರದಲ್ಲಿ ನೈಪುಣ್ಯ ಸಾಧಿಸಿ, ಅಪೇಕ್ಷೆಯ ಉದ್ಯೋಗ ಪಡೆಯಬಹುದು ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಇಂದಿನ ಯುವ ಪೀಳಿಗೆಗೆ ಶಿಕ್ಷಣದ ಜತೆಗೆ ಕೌಶಲಾಧಾರಿತ ತರಬೇತಿ ತುರ್ತು ಅಗತ್ಯವಿದೆ. ಇದನ್ನು ಗಮನಿಸಿ ಪಠ್ಯದೊಂದಿಗೆ ಕೌಶಲ ತರಬೇತಿ ಆರಂಭಿಸುತ್ತಿರುವುದು ಅಭಿನಂದನೀಯ. ದೇಶದ ಎಲ್ಲ ಯುವಕರಿಗೆ ಯಾವುದೇ ಉದ್ಯೋಗ ಒದಗಿಸಿ, ಅವರ ಉತ್ತಮ ಭವಿಷ್ಯ ರೂಪಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
ಎಂಎಲ್‌ಸಿ ಬಲ್ಕಿಷ್ ಬಾನು, ರಾಜ್ಯ ಭೋವಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಕರ್ನಾಟಕ ಎಸ್ಸಿ, ಎಸ್ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಜಿಪಂ ಸಿಇಒ ಎನ್.ಹೇಮಂತ್, ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮುಖಂಡರಾದ ಇಕ್ಕೇರಿ ರಮೇಶ್, ಕಲೀಂಪಾಷಾ, ಮಧು ಇತರರಿದ್ದರು.