

ಮಂಗಳೂರು : ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಕೇಂದ್ರ ಸರ್ಕಾರದಿಂದ ಗ್ರಾಹಕರಿಗೆ ಸಬ್ಸಿಡಿ ದೊರೆಯುತ್ತದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಿ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಕಾರ್ಯಗಾರದ ಸಿದ್ಧತೆಗಳ ಕುರಿತು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಯೋಜನೆಯಡಿ 1 ಕಿಲೋ ವ್ಯಾಟ್‌ಗೆ 30 ಸಾವಿರ ರೂ., 2 ಕಿಲೋ ವ್ಯಾಟ್‌ಗೆ 60 ಸಾವಿರ ರೂ., 3 ಕಿಲೋ ವ್ಯಾಟ್ ಮೇಲ್ಪಟ್ಟ ಸೋಲಾರ್‌ಗಳಿಗೆ 78 ಸಾವಿರ ರೂ.ವರೆಗೆ ಸಬ್ಸಿಡಿ ದೊರೆಯಲಿದೆ ಎಂದರು.
ಸೋಲಾರ್ ಯೋಜನೆಯಿಂದ ಉತ್ಪತ್ತಿಯಾಗುವ ವಿದ್ಯುತ್ ಮನೆಯ ಬಳಕೆಗೆ ಉಪಯೋಗಿಸಬಹುದು .ಹೆಚ್ಚುವರಿ ವಿದ್ಯುತ್ ಅನ್ನು ಮೆಸ್ಕಾಂಗೆ ಮಾರಬಹುದು. ಜ.2ರಂದು ಕೇಂದ್ರ ನವೀಕರಿಸಬಹುದಾದ ಇಂಧನಗಳ ಸಚಿವ ಪ್ರಹ್ಲಾದ ಜೋಶಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಕಾರ್ಯಗಾರ ಉದ್ಘಾಟಿಸಿ ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಸದರು ಜಿಲ್ಲಾಡಳಿತಕ್ಕೆ ಸೂಚಿಸಿದರು.
ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯಕುಮಾರ್ ಮಾತನಾಡಿ ದ.ಕ.ಜಿಲ್ಲೆಯಲ್ಲಿ ಈಗಾಗಲೇ 675 ಜನರು ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದಾರೆ.ಎಂದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮಾತನಾಡಿ ಸೋಲಾರ್ ಉಪಕರಣಗಳ ಖರೀದಿಗೆ ಬ್ಯಾಂಕ್ ಸಾಲ ನೀಡಲು ಬ್ಯಾಂಕ್‌ಗಳೊಂದಿಗೆ ಚರ್ಚಿಸಲಾಗುವುದು ಎಂದರು. ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಜಿಪಂ ಸಿಇಒ ಡಾ. ಆನಂದ್ ಕೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್.ಆನಂದ್, ಲೀಡ್ ಬ್ಯಾಂಕ್ ಮ್ಯಾನೇಜರ್ ಕವಿತಾ ಉಪಸ್ಥಿತರಿದ್ದರು.