ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ

25bhr 2
ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶಕ್ತಿಮಾತೆ ಚೌಡೇಶ್ವರಿ ದೇವಾಲಯದಲ್ಲಿ ವರ ಮಹಾಲಕ್ಷ್ಮಿವ್ರತದ ಅಂಗವಾಗಿ ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ವಿಶೇಷ ಪೂಜೆ ನೆರವೇರಿಸಿದರು.
Published on

ಬಾಳೆಹೊನ್ನೂರು: ಹೋಬಳಿಯಾದ್ಯಂತ ಮಹಿಳೆಯರು ಶುಕ್ರವಾರ ವರಮಹಾಲಕ್ಷ್ಮೀ ವ್ರತವನ್ನು ಶ್ರದ್ಧಾ, ಭಕ್ತಿಯಿಂದ ಆಚರಿಸಿದರು.
ವರಲಕ್ಷ್ಮೀ ವ್ರತದ ಅಂಗವಾಗಿ ಮನೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ, ಕಲಶ ಪ್ರತಿಷ್ಟಾಪಿಸಿ ಭಕ್ತಿಯಿಂದ ಲಕ್ಷ್ಮೀಯನ್ನು ಪೂಜಿಸಿ ಪ್ರಾರ್ಥಿಸಿದರು. ಹಬ್ಬಕೆ ತಯಾರಿಸಿದ ವಿವಿಧ ಖಾದ್ಯಗಳನ್ನು ದೇವರಿಗೆ ನೈವೇದ್ಯ ಮಾಡಿದರು.
ಮುತ್ತೈದೆಯರನ್ನು ಮನೆಗೆ ಆಹ್ವಾನಿಸಿದ ನಾರಿಯರು ಅರಿಶಿನ, ಕುಂಕುಮ, ಹೂ, ಬಳೆಗಳನ್ನು ನೀಡಿ ಸತ್ಕರಿಸಿದರು. ಹೂ, ಹಣ್ಣು ಮತ್ತಿತರ ಪೂಜಾ ಸಾಮಾಗ್ರಿಗಳ ಬೆಲೆ ಏರಿಕೆ ನಡುವೆಯೂ ಲಕ್ಷ್ಮೀ ವ್ರತ ವಿಜೃಂಭಣೆಯಿಂದ ನಡೆಯಿತು.
ಹಬ್ಬದ ಅಂಗವಾಗಿ ರಂಭಾಪುರಿ ಪೀಠದ ಶಕ್ತಿಮಾತೆ ಚೌಡೇಶ್ವರಿ ಅಮ್ಮನವರ ಸನ್ನಿಧಿ ಹಾಗೂ ಭದ್ರಕಾಳಿ ಅಮ್ಮನವರ ಸನ್ನಿಧಿಯಲ್ಲಿ ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ವಿಶೇಷ ಪೂಜೆ ನೆರವೇರಿಸಿ, ಅಷ್ಟೋತ್ತರ, ಕುಂಕುಮಾರ್ಚನೆ ಹಾಗೂ ಮಹಾ ಮಂಗಳಾರತಿ ನೆರವೇರಿದರು.
ಪಟ್ಟಣದ ಮೃತ್ಯಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಕೆ.ಎಸ್.ಪ್ರಕಾಶ್‌ಭಟ್ ನೇತೃತ್ವದಲ್ಲಿ ದೇವರಿಗೆ ವಿವಿಧ ಪುಷ್ಪಾಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗಿತು. ಎನ್.ಆರ್.ಪುರ ರಸ್ತೆಯ ಚೌಡೇಶ್ವರಿ ದೇವಸ್ಥಾನ, ಅಕ್ಷರನಗರದ ಗುರಿಕಟ್ಟೆಬೈಲು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ಸುತ್ತಮುತ್ತಲಿನ ವಿವಿಧ ದೇವಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net