

ಬೆಂಗಳೂರು: 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ಖಾಸಗಿ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಆನ್‌ಲೈನ್ ನೋಂದಣಿ ಆರಂಭವಾಗಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ನಯ ಮಂಡಳಿಯು ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಮಾ.1ರ 2026ಕ್ಕೆ 15 ವರ್ಷ ವಯಸ್ಸು ಪೂರ್ಣಗೊಳ್ಳಲಿರುವ ಅಭ್ಯರ್ಥಿಗಳು ನೇರವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದು. ಅವರನ್ನು ಖಾಸಗಿ ಅಭ್ಯರ್ಥಿಗಳೆಂದು ಪರಿಗಣಿಸಲಾಗುತ್ತದೆ, ಮಂಡಳಿಯ ವೆಬ್‌ಸೈಟ್‌ನಲ್ಲಿ ತಮ್ಮ ಯೂಸರ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿ ನೋಂದಣಿ ಮಾಡಿಕೊಳ್ಳಬಹುದು. ವಯೋಮಾನಕ್ಕೆ ಅನುಗುಣವಾದ ಜನ್ಮ ದಿನಾಂಕ ಪ್ರಮಾಣ ಪತ್ರವನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕು.
ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸುವ ಜತೆಗೆ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಟ್ರ್ಯಾಕ್ ಮಾಡಬಹುದಾಗಿದೆ. ಅಲ್ಲದೆ, ಅರ್ಜಿಯು ಕ್ರಮಬದ್ಧವಾಗಿದ್ದರೆ, ಅರ್ಜಿ ಸಲ್ಲಿಸಿದ 7 ದಿನದೊಳಗೆ ಅನುಮತಿ ನೀಡಲಾಗುತ್ತದೆ. ಇಲ್ಲವಾದಲ್ಲಿ ದಾಖಲೆಗಳನ್ನು ಮರು ಸಲ್ಲಿಸಲು ತಿಳಿಸಲಾಗುತ್ತದೆ. ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿದೆ. ಒಂದು ವೇಳೆ ತಮಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಯದಿದ್ದಲ್ಲಿ ಮಂಡಳಿ ವೆಬ್‌ಸೈಟ್‌ನಲ್ಲಿ ನೋಡಲ್ ಅಧಿಕಾರಿಗಳ ಮಾಹಿತಿಯನ್ನು ನೀಡಲಾಗಿದೆ. ತಮ್ಮ ವ್ಯಾಪ್ತಿಯ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ತಿಳಿಯಬಹುದು.