

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ನಾಳೆ(ಆ.7) ಪ್ರಕಟವಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಸುರೇಶ್ ಕುಮಾರ್, ನಾಳೆಯೇ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕರೊನಾ ಆತಂಕದ ನಡುವೆಯೂ 2019-20ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಬರೆದಿದ್ದು, ಫಲಿತಾಂಶಕ್ಕಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ.
ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಇತ್ತೀಚಿಗೆ ತಿಳಿಸಿದ್ದರು. ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ರಾಜ್ಯದ ಎಲ್ಲ ಕೇಂದ್ರಗಳಲ್ಲೂ ಪೂರ್ಣಗೊಂಡಿದ್ದು, ಶೀಘ್ರವೇ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.