ಸತ್ಸಂಗದಲ್ಲಿ ಭೀಕರ ಕಾಲ್ತುಳಿತ; 27 ಮಂದಿ ಸಾವು, ಹಲವರು ಗಂಭೀರ

Stampede
Published on

ಲಖನೌ: ಸತ್ಸಂಗ ಕಾರ್ಯಕ್ರಮದಲ್ಲಿ ಉಂಟಾದ ಭೀಕರ ಕಾಲ್ತುಳಿತದಿಂದಾಗಿ 27ಕ್ಕೂ ಹೆಚ್ಚು ಮಂದಿ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಹತ್ರಾಸ್​ ಜಿಲ್ಲೆಯ ಸಿಕಂದರಾವು ಪಟ್ಟಣದ ಫುಲ್ರೈ ಗ್ರಾಮದಲ್ಲಿ ನಡೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ವೈದ್ಯಕೀಯ ಅಧಿಕಾರಿ ಉಮೇಶ್​ ತ್ರಿಪಾಠಿ, ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 25 ಮಹಿಳೆಯರು, 2 ಪುರುಷರು ಒಳಗೊಂಡಂತೆ 27 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಗಾಯಾಳುಗಳನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಹತರಾಸ್​ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಭೋಲೆ ಬಾಬಾರ ಸತ್ಸಂಗ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದರು. ಈ ವೇಳೆ ನೂಕುನುಗ್ಗಲಾಗಿದ್ದು, ಕಾಲ್ತುಳಿತ ಉಂಟಾಗಿದೆ. ಘಟನೆಯಲ್ಲಿ 27 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆ ಸಿಎಂ ಯೋಗಿ ಆದಿತ್ಯನಾಥ್​ ತನಿಖೆಗೆ ಆದೇಶಿಸಿದ್ದು, ಅಧಿಕಾರಿಗಳಿಗೆ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ. ಆಗ್ರಾ ಎಡಿಜಿ ಮತ್ತು ಅಲಿಗಢದ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಮೃತರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net