

ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಮೇ 18ರಿಂದ 20ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
2017ರಲ್ಲಿ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ನಡೆದಿತ್ತು. ಎಂಟು ವರ್ಷಗಳ ಬಳಿಕ ಮತ್ತೊಮ್ಮೆ ರಾಜ್ಯಮಟ್ಟದ ಪಂದ್ಯಾವಳಿ ಆಯೋಜಿಸಿದ್ದು, 18ರಂದು ಸಂಜೆ 5ಕ್ಕೆ ನೆಹರು ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕ್ರೀಡಾಜ್ಯೋತಿ ಸ್ವೀಕರಿಸುವರು. ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು ಕ್ರೆಡಿಲ್ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಕ್ರೀಡಾಪಟುಗಳನ್ನು ಸನ್ಮಾನಿಸುವರು. ಜಿಲ್ಲೆಯ ಚುನಾಯಿತ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಪಾಲ್ಗೊಳ್ಳುವರು ಎಂದರು.
ಕ್ರೀಡಾಕೂಟದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ 15 ಸಾವಿರ ಕ್ರೀಡಾಪಟುಗಳು ಆಗಮಿಸುವ ನಿರೀಕ್ಷೆ ಇದೆ. ಕ್ರೀಡೆಯಲ್ಲಿ ಭಾಗವಹಿಸುವ ಎಲ್ಲ ಸ್ಪರ್ಧಾಳುಗಳಿಗೆ ಎನ್‌ಇಎಸ್ ಮೈದಾನದಲ್ಲಿ ಊಟ, ವಸತಿ ಇರಲಿದೆ. 40 ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಸಾರಿಗೆ ವ್ಯವಸ್ಥೆ ಬಳಸಿಕೊಳ್ಳಲಾಗುವುದು. 97 ವೈಯುಕ್ತಿಕ ಸ್ಪರ್ಧೆಗಳು ನಡೆದರೆ 16 ಗುಂಪು ಸ್ಪರ್ಧೆಗಳು ನಡೆಯಲಿವೆ. ಸಾಂಸ್ಕೃತಿಕ ಸ್ಪರ್ಧೆಯಲ್ಲಿ 15 ವೈಯಕ್ತಿಕ, 16 ಗುಂಪು ಸ್ಪರ್ಧೆಗಳು ನಡೆಯಲಿವೆ. ವಿಶೇಷವಾಗಿ ಪ್ರತಿ ಕ್ರೀಡೆಗಳಲ್ಲೂ ಪುರುಷ ಮತ್ತು ಮಹಿಳೆಯರಿಗೆ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಸಲಾಗುವುದು ಎಂದು ಹೇಳಿದರು.
ರಾಜೇಶ್ ಕೃಷ್ಣನ್ ಅವರಿಂದ ಸಂಗೀತ ಸಂಜೆ
18ರಂದು ನಗರದ ಎನ್‌ಇಎಸ್ ಮೈದಾನದಲ್ಲಿ ನೋಂದಣಿ ಕಾರ್ಯ ನಡೆಯಲಿದೆ. ಪಾಲ್ಗೊಳ್ಳುವ ಎಲ್ಲ ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ. ಅಂದು ಸಂಜೆ 7ಕ್ಕೆ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರು ಗಾನಸುಧಾ-ಸಂಗೀತ ಸಂಜೆ ಕಾರ್ಯಕ್ರಮ ನಡೆಸಿಕೊಡುವರು. ಈ ಕಾರ್ಯಕ್ರಮದಲ್ಲಿ ಸರಿಗಮಪ ಸ್ಪರ್ಧೆಯ ಪ್ರತಿಭಾವಂತ ಸ್ಪರ್ಧಾಳುಗಳು ಕೂಡ ಭಾಗವಹಿಸುವರು. ಮೇ 19ರಂದು ಸಂಜೆ ರಾಜ್ಯದ ಪ್ರತಿಭಾವಂತ ಜನಪದ ಕಲಾವಿದರನ್ನೊಳಗೊಂಡ ಜನಪದ ದಿಬ್ಬಣ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಿ.ಎಸ್.ಷಡಾಕ್ಷರಿ ಹೇಳಿದರು.
ಮೇ 20ರಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ವಿಜೇತರಿಗೆ ಟ್ರೋಫಿ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಸರ್ಕಾರವು ಓಓಡಿ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ನೌಕರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಪಾಪಣ್ಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ಧಬಸಪ್ಪ, ದಿನೇಶ್, ಸತೀಶ್, ಆರ್.ಮಾರುತಿ ಸುದ್ದಿಗೋಷ್ಠಿಯಲ್ಲಿದ್ದರು.