ಮಳೆಯ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಯಾರೂ ಉದ್ಯೋಗಕ್ಕಾಗಿ ಗುಳೆ ಹೋಗದಂತೆ ತಡೆಯುವುದು ಸರ್ಕಾರದ ಆದ್ಯತೆ
ಅಂತರ್ಜಲ ಮಟ್ಟ ಹೆಚ್ಚಿಸುವ ಕಾಮಗಾರಿ, ಕೊಟ್ಟಿಗೆ ನಿರ್ಮಾಣ, ರಸ್ತೆ ಹಾಗೂ ಕಾಲುವೆ ನಿರ್ಮಾಣ ಸೇರಿದಂತೆ 318 ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ
ಬೆಂಗಳೂರು:
ಗ್ರಾಮಗಳ ಸಮಗ್ರ ಅಭಿವೃದ್ಧಿಯೇ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಓ) ಪರಮ ಧ್ಯೇಯ ಮತ್ತು ಗುರಿಯಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಕರೆ ನೀಡಿದರು.
ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಗ್ರೇಡ್-1 ಕಾರ್ಯದರ್ಶಿ ಹುದ್ದೆಯಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾಗಿ ಮುಂಬಡ್ತಿ ಪಡೆದ 528 ಸಿಬ್ಬಂದಿಗೆ ನಿಷ್ಠೆ, ದಕ್ಷತೆ ಮತ್ತು ಪ್ರಾಮಾಣಿಕತೆಯ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ, ಕೆರೆ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳ ಜವಾಬ್ದಾರಿ ಗ್ರಾಮ ಪಂಚಾಯತಿಗಳ ಮೇಲಿದೆ. ಈ ಹೊಣೆಗಾರಿಕೆಯನ್ನು ನಿರ್ವಹಿಸುವ ಪಿಡಿಓಗಳು ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಯಾರೂ ಉದ್ಯೋಗಕ್ಕಾಗಿ ಗುಳೆ ಹೋಗದಂತೆ ತಡೆಯುವುದು ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಆರ್ಥಿಕ ಹೊರೆ ಇದ್ದರೂ ಸರ್ಕಾರ ವಿಬಿಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಶಾಶ್ವತ ಆಸ್ತಿಗಳ ನಿರ್ಮಾಣ ಹಾಗೂ ಬಡ ಮತ್ತು ಶೋಷಿತ ವರ್ಗದ ಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಪಿಡಿಓಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.
ಅಂತರ್ಜಲ ಮಟ್ಟ ಹೆಚ್ಚಿಸುವ ಕಾಮಗಾರಿ, ಕೊಟ್ಟಿಗೆ ನಿರ್ಮಾಣ, ರಸ್ತೆ ಹಾಗೂ ಕಾಲುವೆ ನಿರ್ಮಾಣ ಸೇರಿದಂತೆ 318 ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಈಗಾಗಲೇ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಾಗಿ ಅನುಭವ ಹೊಂದಿರುವ ನೀವು ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಗ್ರಾಮೀಣ ಜನರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಬೇಕು ಎಂದು ಸೂಚಿಸಿದರು.
ರಾಜ್ಯದಲ್ಲಿ ಪ್ರತಿದಿನ ಸುಮಾರು 3 ಲಕ್ಷ ಮಾನವ ದಿನಗಳು ಸೃಷ್ಟಿಯಾಗುತ್ತಿದ್ದು, ತಿಂಗಳ ಅಂತ್ಯದೊಳಗೆ ಅದನ್ನು 5 ರಿಂದ 6 ಲಕ್ಷ ಮಾನವ ದಿನಗಳಿಗೆ ಹೆಚ್ಚಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸುವಂತೆ ಸಚಿವರು ಕರೆ ನೀಡಿದರು.
ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಿದ ಅವರು, ಸಮುದಾಯ ಆರೋಗ್ಯ ಕಾಪಾಡುವಲ್ಲಿ ನೈರ್ಮಲ್ಯ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಿವು ಕೇಂದ್ರಗಳು (ಗ್ರಂಥಾಲಯಗಳು) ಗ್ರಾಮೀಣ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.
ಗ್ರಾ.ಪಂ. ಸಿಬ್ಬಂದಿ ತಾಂತ್ರಿಕ ಜ್ಞಾನವನ್ನು ಹೆಚ್ಚಿಸಿಕೊಂಡು ಇ-ಸ್ವತ್ತು ಸೇವೆಯನ್ನು ಸಕಾಲದಲ್ಲಿ ಒದಗಿಸಬೇಕು. ಕೆರೆ, ಕುಂಟೆ ಸೇರಿದಂತೆ ಸರ್ಕಾರದ ಆಸ್ತಿಗಳನ್ನು ಸಂರಕ್ಷಿಸುವ ಜವಾಬ್ದಾರಿಯನ್ನೂ ಸಮರ್ಥವಾಗಿ ನಿರ್ವಹಿಸಬೇಕು ಎಂದರು.
ನಮ್ಮ ಹೊಲ ನಮ್ಮ ದಾರಿ ಯೋಜನೆಯನ್ನು ಜಾರಿಗೆ ತರುವ ಉದ್ದೇಶವಿದ್ದು, ಈ ಕುರಿತು ಶೀಘ್ರದಲ್ಲೇ ಯೋಜನೆ ರೂಪಿಸಲಾಗುವುದು. ಶಿಕ್ಷಣ, ಸಮುದಾಯ ಆರೋಗ್ಯ ಹಾಗೂ ಗ್ರಾಮೀಣ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಿಮಗೆ ನಿಯೋಜನೆಯಾಗುವ ಗ್ರಾ.ಪಂ.ಗಳಲ್ಲಿ ಜನಪರ ಸೇವೆ ಸಲ್ಲಿಸಿ, ಗ್ರಾಮೀಣ ಅಭಿವೃದ್ಧಿಯನ್ನೇ ಮುಖ್ಯ ಗುರಿಯಾಗಿಸಿಕೊಂಡು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದ ಅವರು, ಎಲ್ಲರಿಗಳಿಗೂ ಪ್ರತಿಜ್ಞಾವಿಧಿ ಬೋಧಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತೆ ಡಾ. ಅರುಂದತಿ ಚಂದ್ರಶೇಖರ್, ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ಸಿಇಒ ಯತೀಶ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
*ಗ್ರಾ.ಪಂ. ಸಿಬ್ಬಂದಿ ತಾಂತ್ರಿಕ ಜ್ಞಾನವನ್ನು ಹೆಚ್ಚಿಸಿಕೊಂಡು ಇ-ಸ್ವತ್ತು ಸೇವೆಯನ್ನು ಸಕಾಲದಲ್ಲಿ ಒದಗಿಸಬೇಕು. ಕೆರೆ, ಕುಂಟೆ ಸೇರಿದಂತೆ ಸರ್ಕಾರದ ಆಸ್ತಿಗಳನ್ನು ಸಂರಕ್ಷಿಸುವ ಜವಾಬ್ದಾರಿಯನ್ನೂ ಸಮರ್ಥವಾಗಿ ನಿರ್ವಹಿಸಬೇಕು.-ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಬಿ. ಖಂಡ್ರೆ