ಕೃಷಿ ಉತ್ಪನ್ನ ಮೌಲ್ಯವರ್ಧನೆಯಿಂದ ಲಾಭ: ರೈತರಿಗೆ ಡಾ. ಎಸ್. ಸೆಲ್ವಕುಮಾರ್ ಸಲಹೆ

ಡಾ. ಎಸ್.ಸೆಲ್ವಕುಮಾರ್
ಡಾ. ಎಸ್.ಸೆಲ್ವಕುಮಾರ್
Published on
ಬೆಂಗಳೂರು: ರೈತರು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಅಧಿಕ ಲಾಭ ಗಳಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್ ಕರೆ ನೀಡಿದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್‌ಕೆಸಿಸಿಐ), ಕೇಂದ್ರ ಆಹಾರ ಸಂಸ್ಕರಣೆ ಸಚಿವಾಲಯ, ರಾಜ್ಯ ಕೃಷಿ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ (ಕೆಪೆಕ್) ಮತ್ತು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅರಮನೆ ಮೃದಾನದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಕೃಷಿ ತಂತ್ರಜ್ಞಾನ ಶೃಂಗಸಭೆ’ಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ರೈತರು ಉತ್ಪಾದನೆ ಮಾಡಿದರೆ ಸಾಕಾಗದು. ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಬೇಕು. ಆಗ ಅಧಿಕ ಲಾಭ ಗಳಿಸಬಹುದು. ಈ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯಗಳು, ತೋಟಗಾರಿಕಾ ವಿವಿಗಳು, ಪಶು ಸಂಗೋಪನೆ, ಕೃಷಿ ಸೇರಿ ಸರ್ಕಾರದ ಇಲಾಖೆಗಳು, ಸಂಘ-ಸಂಸ್ಥೆಗಳು, ರೈತ ಉತ್ಪಾದಕ ಸಂಸ್ಥೆಗಳು ಸಹಕಾರ ನೀಡಬೇಕು. ಇದರಲ್ಲಿ ಕೆಪೆಕ್ ಪಾತ್ರ ಬಹಳ ಮುಖ್ಯವಾಗಿದೆ. ಕೆಪೆಕ್‌ನ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್ ಈ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಕೃಷಿ ಇಲಾಖೆಯಿಂದ ನಾವು ಅಗತ್ಯ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದರು.
ದೇಶವು ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಿದ್ದರೂ ಸಹ ಇನ್ನೂ ಕೆಲವು ರಂಗದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕಿದೆ. ನಾವು ಉತ್ಪಾದನೆ ಹೆಚ್ಚು ಮಾಡಿದರೂ ಸಹ ಉತ್ಪಾದಕತೆ ಹೆಚ್ಚಿಸಲು ಅವಕಾಶವಿದೆ. ಇದಕ್ಕೆ ತಾಂತ್ರಿಕತೆ ಒಂದೇ ಮಂತ್ರವಾಗಿದೆ. ಕಡಿಮೆ ವೆಚ್ಚದಲ್ಲಿ ತಾಂತ್ರಿಕತೆಯನ್ನು ರೈತರಿಗೆ ನೀಡಿದರೆ ಅವರು ಲಾಭಾಂಶವನ್ನು ಹೆಚ್ಚಿಸಿಕೊಳ್ಳುತ್ತಾರೆ. ಇನ್ನೂ ಹೆಚ್ಚು ಉತ್ಪಾದಿಸಿ ದೇಶಕ್ಕೆ ಕೊಡುಗೆ ನೀಡುತ್ತಾರೆ. ಆ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದರು.
ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್, ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಡಾ. ಬಿ.ಸಿ. ಮುದ್ದುಗಂಗಾಧರ್ ಮತ್ತು ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net