ತಾಳಿಕೋಟೆ ಪಟ್ಟಣದಲ್ಲಿ ಬೂದಿಹಾಳ-ಪೀರಾಪೂರ ಏತ ನೀರಾವರಿ ಯೋಜನೆ ಸಂಪೂರ್ಣ ಅನುಷ್ಠಾನಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಶ್ರೀ ಸಿದ್ಧಲಿಂಗ ದೇವರು, ಮಾಜಿ ಶಾಸಕ ಸೋಮನಗೌಡ ಪಾಟೀಲ, ಮಲ್ಲನಗೌಡ ಹಗರಟಗಿ, ಬಸನಗೌಡ ಪಾಟೀಲ ಎಡೆಯಾಪುರ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ರೈತ ಸಂಘದಿಂದ ಬೃಹತ್ ಪ್ರತಿಭಟನೆ
ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ
ತಾಳಿಕೋಟೆ: ಪಟ್ಟಣದಲ್ಲಿ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ ಸಂಪೂರ್ಣ ಅನುಷ್ಠಾನಗೊಳಿಸುವುದು, ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಸೇರಿ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶ್ರೀ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಶ್ರೀ ಸಿದ್ಧಲಿಂಗ ದೇವರು ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ತಾಲೂಕು ಘಟಕದೊಂದಿಗೆ ರೈತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ರೈತರ ಪ್ರತಿಭಟನಾ ಮೆರವಣಿಗೆಗೆ ಸಿದ್ಧಲಿಂಗ ದೇವರು ಚಾಲನೆ ನೀಡಿ ಆಶೀರ್ವಚನ ನೀಡಿದರು.
ಪ್ರತಿಭಟನಾ ಮೆರವಣಿಗೆ ಕತ್ರಿ ಬಜಾರ್, ಶಿವಾಜಿ ಸರ್ಕಲ್, ಮಹಾರಾಣಾ ಪ್ರತಾಪ್ ಸಿಂಹ ಸರ್ಕಲ್ ಹಾಗೂ ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ತಲುಪಿ ಅಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲ ಹೊತ್ತು ರಸ್ತೆ ತಡೆ ನಡೆಸಿ ಯೋಜನೆ ವಿಳಂಬ ಖಂಡಿಸಿ ಧಿಕ್ಕಾರ ಕೂಗಿದರು.
ಕರ್ನಾಟಕ ರಾಜ್ಯ ರೈತ ಸಂಘ ಯಾದಗಿರಿ ಜಿಲ್ಲಾ ಅಧ್ಯಕ್ಷ ಮಲ್ಲನಗೌಡ ಹಗರಟಗಿ ಮಾತನಾಡಿ, ಸುಮಾರು 935 ಕೋಟಿ ರೂ. ವೆಚ್ಚದ ಈ ನೀರಾವರಿ ಯೋಜನೆ ಮುಕ್ತಾಯ ಹಂತಕ್ಕೆ ಬಂದಿದೆ. ಇನ್ನು 160 ಕೋಟಿ ರೂ. ಅನುದಾನದಲ್ಲಿ ಪೂರ್ಣಗೊಳ್ಳಲಿದೆ. ಆದರೆ, ಜನಪ್ರತಿನಿಧಿಗಳು ಇದಕ್ಕೆ ಇಚ್ಛಾಶಕ್ತಿ ತೋರುತ್ತಿಲ್ಲ. ಈ ಭಾಗದ ರೈತರಿಗೆ ಬೆಳೆ ವಿಮೆ ಪರಿಹಾರ ಸಮರ್ಪಕವಾಗಿ ಸಿಕ್ಕಿಲ್ಲ. ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಎಡೆಯಾಪುರ ಮಾತನಾಡಿ, ಈ ಯೋಜನೆ ಕೆಲವು ತಾಂತ್ರಿಕ ಕಾರಣಗಳಿಂದ ಪೂರ್ಣಗೊಳ್ಳುತ್ತಿಲ್ಲ. ಇದಕ್ಕೆ ಕೆಬಿಜೆಎನ್‌ಎಲ್ ಅಧಿಕಾರಿಗಳು ಆಸಕ್ತಿ ವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.
ಮಾಜಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ನನ್ನ ಶಾಸಕತ್ವದ ಅವಧಿಯಲ್ಲಿ ಸಾಕಷ್ಟು ಪ್ರಯತ್ನ ಮಾಡಿ ಈ ಯೋಜನೆಯನ್ನು ತಂದಿದ್ದೇನೆ. ಆದರೆ, ಇವತ್ತು ಅದನ್ನು ಪೂರ್ಣಗೊಳಿಸಲು ಪ್ರಯತ್ನ ಮಾಡದೇ ಇರುವುದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದು ಅನಿವಾರ್ಯವಾಗುತ್ತದೆ ಎಂದರು.
ತಹಸೀಲ್ದಾರ್ ಡಾ. ವಿನಯಾ ಹೂಗಾರ ಅವರಿಗೆ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಮಾಜಿ ಜಿಲ್ಲಾ ಅಧ್ಯಕ್ಷ ಆರ್.ಎಸ್. ಪಾಟೀಲ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ರಾಜುಗೌಡ, ಅನಂತ ರೆಡ್ಡಿ, ಬಸನಗೌಡ ಮಾಲಿಪಾಟೀಲ, ಶಾಂತಗೌಡ ಮಾಲಿಪಾಟೀಲ ಸೇರಿ ನೂರಾರು ರೈತರು ಭಾಗವಹಿಸಿದ್ದರು.
ಸಿಪಿಐ ಮೊಹಮ್ಮದ್ ಸಿಯುದ್ದೀನ, ಪಿಎಸ್‌ಐ ಜ್ಯೋತಿ ಖೋತ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಂಡಿತ್ತು.