ವಿಜಯಪುರಕ್ಕೆ ಹೆಚ್ಚುವರಿ ರೈಲು ಸೇವೆ ತರಲಿ..!

ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ
ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ
Published on

ಪ್ರಮುಖ ಮುಖ್ಯಾಂಶಗಳು

  • ಸಂಸದ ರಮೇಶ ಜಿಗಜಿಣಗಿಗೆ ವಿ.ಪ. ಸದಸ್ಯ ಸುನೀಲಗೌಡ ಪಾಟೀಲರಿಂದ ಸವಾಲು
ವಿಜಯಪುರ: ಪೆಟ್ರೋಲ್ ಮತ್ತು ಡೀಸೆಲ್ ದರ ಹೊರೆಯಾಗುತ್ತಿರುವ ಪ್ರಸ್ತುತ ದಿನಗಳಲ್ಲಿ ವಿಜಯಪುರದಿಂದ ಬೆಂಗಳೂರು ಮತ್ತು ಮುಂಬೈಗೆ ಹೆಚ್ಚುವರಿ ರೈಲು ಸೇವೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಮೂಲಕ ಸಂಸದ ರಮೇಶ ಜಿಗಜಿಣಗಿ ತಮ್ಮ ಶಕ್ತಿ ತೋರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಸವಾಲು ಹಾಕಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಸುನೀಲಗೌಡ ಪಾಟೀಲ, ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಜಗತ್ತಿಗೆ ಮಾದರಿಯಾಗಿದ್ದು, ಅವುಗಳನ್ನು ಬಿಜೆಪಿ ಆಡಳಿತದಲ್ಲಿರುವ ಸರ್ಕಾರಗಳೂ ಕೂಡ ನಕಲು ಮಾಡುತ್ತಿವೆ. ಅಂತಹ ಸಂದರ್ಭದಲ್ಲಿ ಸಂಸದರು, ರಾಜ್ಯದ ಯೋಜನೆಗಳ ಬಗ್ಗೆ ಪದೇಪದೆ ಟೀಕೆ ಮಾಡುತ್ತಿರುವುದು ಹಾಸ್ಯಾಸ್ಪದ ಪ್ರಚಾರಕ್ಕಾಗಿ ಹೇಳಿಕೆಗಳನ್ನು ನೀಡುವ ಬದಲು ವಿಜಯಪುರಕ್ಕೆ ವಂದೇ ಭಾರತ ರೈಲು ಸೇವೆ ಪ್ರಾರಂಭಿಸುವ ನಿಟ್ಟಿನಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಬೇಕೆಂದು ಸುನೀಲಗೌಡ ಪಾಟೀಲ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ವೈಫಲ್ಯದ ಪರಿಣಾಮವಾಗಿ ದಿನೇದಿನೆ ಪೆಟ್ರೋಲ್, ಗ್ಯಾಸ್ ಬೆಲೆಗಳು ಹೆಚ್ಚಾಗುತ್ತಿವೆ. ಅದರಿಂದ ಜನ ಸಾಮಾನ್ಯರಿಗೆ ಹೊರೆಯಾಗುತ್ತಿದೆ. ನಿತ್ಯ ವಿಜಯಪುರ ಜಿಲ್ಲೆಯಿಂದ ಹತ್ತಾರು ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ಬೆಂಗಳೂರಿಗೆ ಮತ್ತು ಮುಂಬೈಗೆ ಸಂಚರಿಸುತ್ತವೆ. ಈ ಸಂದರ್ಭದಲ್ಲಿ ವಿಜಯಪುರದಿಂದ ಹೆಚ್ಚುವರಿ ರೈಲುಗಳನ್ನು ಓಡಿಸಬೇಕು. ರೈಲುಗಳು ವಿದ್ಯುತ್ ಶಕ್ತಿಯ ಮೇಲೆ ಸಂಚರಿಸುತ್ತವೆ. ಅದರಿಂದ ಜನತೆಗೆ ಅನುಕೂಲವಾಗಲಿದೆ. ಮಾತ್ರವಲ್ಲ ಪರಿಸರಕ್ಕೂ ಪೂರಕವಾಗಲಿದೆ. ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಬಳಸುವುದರಿಂದ ತೈಲ ಬಳಕೆಯೂ ಕಡಿಮೆಯಾಗಲಿದೆ. ಏಳು ಬಾರಿ ಸಂಸದರಾಗಿರುವ ಸಂಸದರು ಕೇಂದ್ರ ಸರ್ಕಾರದಲ್ಲಿರುವ ತಮ್ಮ ವರ್ಚಸ್ಸನ್ನು ಬಳಸಿ ರೈಲುಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.
ನಾನು ಕಳೆದ ಮೂರು ವರ್ಷಗಳಿಂದ ಸತತವಾಗಿ ಪ್ರಧಾನಿ, ರೇಲ್ವೆ ಸಚಿವರು, ಹೆದ್ದಾರಿ ಸಚಿವರಿಗೆ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು ಮತ್ತು ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಉನ್ನತೀಕರಿಸಬೇಕು. ಅಲ್ಲದೆ, ವಿಜಯಪುರದಿಂದ ಬೆಂಗಳೂರಿಗೆ ಸಂಚರಿಸುವ ರೈಲು ಸಂಚಾರದ ಅವಧಿಯನ್ನು ಕಡಿಮೆ ಮಾಡಬೇಕು ಎಂದು ಪತ್ರ ಬರೆದು ಗಮನ ಸೆಳೆದಿದ್ದೇನೆ. ಹೀಗಾಗಿ, ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಸಂಸದರು ತಮ್ಮ ಪ್ರಭಾವ ಬಳಸಿ ಕೇಂದ್ರದಿಂದ ಬರಬೇಕಾದ ಯೋಜನೆಗಳನ್ನು ಜಿಲ್ಲೆಯ ಜನರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ವಂದೇ ಭಾರತ ರೈಲು ಸೇವೆ ಮತ್ತು ಹೆಚ್ಚುವರಿ ರೈಲುಗಳ ಸಂಚಾರ ಪ್ರಾರಂಭಿಸಲು ಸಂಸದರು ಕ್ರಮ ಕೈಗೊಂಡರೆ ಬಸವನಾಡಿನ ಇತಿಹಾಸದಲ್ಲಿ ಅವರ ಕೆಲಸ ಕಾರ್ಯಗಳು ಶಾಶ್ವತವಾಗಿ ಉಳಿಯಲಿವೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net