ಜಾತಿ ಆಧಾರಿತ ಚುನಾವಣೆ ಪ್ರಜಾತಂತ್ರಕ್ಕೆ ಮಾರಕ

ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್ ವಿದ್ಯಾರ್ಥಿಗಳಿಂದ ವಂದನೆ ಸ್ವೀಕರಿಸಿದರು.
ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್ ವಿದ್ಯಾರ್ಥಿಗಳಿಂದ ವಂದನೆ ಸ್ವೀಕರಿಸಿದರು.
Published on
ಪಾಂಡವಪುರ: ಪ್ರಜಾಪ್ರಭುತ್ವದ ಅಡಿಯಲ್ಲಿ ನಡೆಯುತ್ತಿರುವ ಚುನಾವಣೆಗಳು ಜಾತಿ ಆಧಾರಿತ, ಹಣ ಸೇರಿದಂತೆ ಹಲವು ಆಮಿಷಗಳಿಗೆ ಒಳಗಾಗುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುತ್ತಿದೆ ಎಂದು ಉಪವಿಭಾಗಾಧಿಕಾರಿ ಶ್ರೀನಿವಾಸ್ ವಿಷಾದಿಸಿದರು.

ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ನಾಡಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಂವಿಧಾನದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯರಿಗೂ ಮತದಾನ ಮಾಡುವ ಹಕ್ಕು ನೀಡಲಾಗಿದೆ. ಮತದಾರರು ಯಾವುದೇ ಜಾತಿ, ಹಣ ಆಮಿಷಗಳಿಗೆ ಒಳಗಾಗದೆ ತಮ್ಮ ಮತ ಚಲಾಯಿಸಬೇಕು. ಜತೆಗೆ ಸಂವಿಧಾನದ ಮೂಲಭೂತ ಹಕ್ಕುಗಳ ಜತೆಗೆ ಕರ್ತವ್ಯಗಳನ್ನು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಪೂರ್ವಿಕರ ಹೋರಾಟ, ಬಲಿದಾನದಿಂದಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಪ್ರತಿಯೊಬ್ಬರು ಸಂವಿಧಾನದ ಆಶಯಗಳಿಗೆ ಧಕ್ಕೆ ಆಗದಂತೆ ನಡೆದುಕೊಳ್ಳಬೇಕಿದೆ. ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಬೇಕು ಎಂದರು.

ಗಣರಾಜ್ಯೋತ್ಸವದಲ್ಲಿ ವಿವಿಧ ಶಾಲೆಗಳ ಬ್ಯಾಂಡ್‌ಸೆಟ್ ತಂಡಗಳಿಂದ ವೇದಿಕೆ ಮೇಲಿನ ಗಣ್ಯರಿಗೆ ವಂದನೆ ಸಲ್ಲಿಸಲಾಯಿತು. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ತಾಲೂಕು ಆಡಳಿತದ ವತಿಯಿಂದ ಅಭಿನಂದಿಸಲಾಯಿತು.

ವಿವಿಧ ಶಾಲೆಗಳ ಮಕ್ಕಳಿಂದ ನಾಡು-ನುಡಿ, ರಾಷ್ಟ್ರಕ್ಕೆ ಸಂಬಂಧಿಸಿದ ಹಲವು ಹಾಡುಗಳಿಗೆ ನೃತ್ಯ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದರು.
ಸಮಾರಂಭದಲ್ಲಿ ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ, ತಾಪಂ ಇಒ ವೀಣಾ, ಪುರಸಭೆ ಮುಖ್ಯಾಧಿಕಾರಿ ಸತೀಶ್, ರೈತ ಸಂಘ ತಾಲೂಕು ಅಧ್ಯಕ್ಷ ವಿಜಯ್‌ಕುಮಾರ್, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್, ಕೆ.ಟಿ.ಗೋವಿಂದೇಗೌಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net