

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಆಶಾ ಕಾರ್ಯಕರ್ತರ ಸಂಘವು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಇದೀಗ ಐದನೇ ದಿನಕ್ಕೆ ಕಾಲಿಟ್ಟಿದ್ದು, ಮುಖ್ಯಮಂತ್ರಿಗಳ ಸತತ ಪ್ರಯತ್ನಗಳ ವಿಫಲಗೊಂಡಿದೆ. ಇದರ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್, ಟ್ವೀಟ್ ಮೂಲಕ ಮತ್ತೊಮ್ಮೆ ಆಶಾ ಕಾರ್ಯಕರ್ತೆಯರಿಗೆ ಒಬ್ಬ ಸಹೋದರನಾಗಿ ಕಳಕಳಿಯಿಂದ ಮನವಿ ಮಾಡಿಕೊಂಡಿದ್ದಾರೆ.
ನಿಮ್ಮ ಬೇಡಿಕೆಗಳಿಗಾಗಿ ನೀವು ನಡೆಸುತ್ತಿರುವ ಹೋರಾಟದ ನೋವು ಮತ್ತು ಸಂಕಷ್ಟ ನನಗೆ ಅರ್ಥವಾಗುತ್ತದೆ. ನಿಮ್ಮ ಕುಟುಂಬದವರನ್ನು ಬಿಟ್ಟು ಹಗಲು-ರಾತ್ರಿ ಎನ್ನದೆ ಹೋರಾಟ ಮಾಡುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ನೀವು ನನಗೆ ಕೇವಲ ಆಶಾ ಕಾರ್ಯಕರ್ತೆಯರಲ್ಲ, ನನ್ನ ಸಹೋದರಿಯರಿದ್ದಂತೆ ಎಂದಿದ್ದಾರೆ.
ಅಂಗನವಾಡಿಗಳ ಸ್ಥಾಪನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರಂಭ ಹಾಗೂ ಆಶಾ ಕಾರ್ಯಕರ್ತೆಯರ ಹುದ್ದೆಗಳ ಸೃಷ್ಟಿಯ ಮೂಲಕ ಮಹಿಳೆಯರು ಮತ್ತು ಆರೋಗ್ಯ ಕ್ಷೇತ್ರದ ಕಾರ್ಯಕರ್ತೆಯರಿಗೆ ಸೇವೆಯ ಅವಕಾಶ ಕಲ್ಪಿಸಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ನಿಮ್ಮ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಸಮಗ್ರ ಮತ್ತು ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.
ಸಂಪುಟದ ಜತೆಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ನಿಮ್ಮೊಂದಿಗೆ ನಾವಿದ್ದೇವೆ. ಒಬ್ಬ ಅಣ್ಣನಾಗಿ ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ನನ್ನ ಮನವಿಗೆ ಸ್ಪಂದಿಸಿ, ಹೋರಾಟವನ್ನು ಕೈಬಿಡಿ. ನಿಮ್ಮ ಸೇವೆ, ಶ್ರಮ ಮತ್ತು ತ್ಯಾಗವನ್ನು ನಾವು ಗೌರವಿಸುತ್ತೇವೆ. ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.