ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಗಿಫ್ಟ್: ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡರ ಹೆಸರು; ಐ.ವಿ.ಎಫ್ ಕೇಂದ್ರ ಸ್ಥಾಪನೆ;ಹೊಸ ಹಾಸ್ಟೆಲ್ ನಿರ್ಮಾಣ | CM Siddaramaiah Budget

ವಿಕ್ಟೋರಿಯಾ ಆಸ್ಪತ್ರೆಗೆ ಮರುನಾಮಕರಣ
ವಿಕ್ಟೋರಿಯಾ ಆಸ್ಪತ್ರೆಗೆ ಮರುನಾಮಕರಣ
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಬಜೆಟ್​ 2026
  • ವಿಕ್ಟೋರಿಯಾ ಆಸ್ಪತ್ರೆಗೆ ಮರುನಾಮಕರಣ
  • ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ
  • ಐ.ವಿ.ಎಫ್ ಕೇಂದ್ರ ಸ್ಥಾಪನೆ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೊಸ ಹಾಸ್ಟೆಲ್ ನಿರ್ಮಾಣ
ಬೆಂಗಳೂರು: ಶುಕ್ರವಾರ (ಮಾ.6) ಸಿಎಂ ಸಿದ್ದರಾಮಯ್ಯನವರು 2026-27 ನೇ ಸಾಲಿನ ಬಜೆಟ್​ನ್ನು ಮಂಡಿಸಿದ್ದು, ಇದು ಸಿದ್ದರಾಮಯ್ಯ (CM Siddaramaiah Budget) ಅವರು ಮಂಡಿಸಿದ 17 ನೇ ಬಜೆಟ್​ ಆಗಿದೆ.ಈ ಭಾರಿಯ ಬಜೆಟ್​ ಗಾತ್ರ ಸುಮಾರು 4.48,004 ಕೋಟಿ ಆಗಿದ್ದು, ಆರೋಗ್ಯ ಕುಟುಂಬ ಕಲ್ಯಾಣ ಯೋಜನೆಗಾಗಿ ಸುಮಾರು 17, 818 ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ.
ಬಜೆಟ್​ ಮಂಡನೆ ಆರಂಭಿಸಿರುವ ಮುಖ್ಯಮಂತ್ರಿಗಳು ಐತಿಹಾಸಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದಾರೆ. ಬೆಂಗಳೂರು ವೈದ್ಯಕೀಯ ಕಾಲೇಜಿನ MBBS ಮತ್ತು BDS ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಇದರೊಟ್ಟಿಗೆ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸುವ ಯೋಜನೆಯನ್ನು ರೂಪಿಸಲಾಗಿದೆ ಎಂದರು.

ವಿಕ್ಟೋರಿಯಾ ಆಸ್ಪತ್ರೆ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯು ನಗರದ ಅತ್ಯಂತ ಹಳೆಯ ಮತ್ತು ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಾಗಿದೆ. 1900ರಲ್ಲಿ ಅಂದಿನ ಮೈಸೂರು ಸಂಸ್ಥಾನದ ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿ ವಿಲಾಸ್ ಅವರಿಂದ ಸ್ಥಾಪಿಸಲ್ಪಟ್ಟ ಈ ಆಸ್ಪತ್ರೆಗೆ, ರಾಣಿ ವಿಕ್ಟೋರಿಯಾರ ಆಳ್ವಿಕೆಯ 60ನೇ ವರ್ಷದ ನೆನಪಿಗಾಗಿ ಆ ಹೆಸರು ಇಡಲಾಯಿತು.
ಅಂದಿನ ವೈಸ್‌ರಾಯ್ ಲಾರ್ಡ್ ಕರ್ಜನ್ ಅವರಿಂದ ಉದ್ಘಾಟನೆಗೊಂಡ ಈ ಆಸ್ಪತ್ರೆ, ಇಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (BMCRI) ಪ್ರಮುಖ ಬೋಧನಾ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸುತ್ತಿದೆ. 1,000ಕ್ಕೂ ಹೆಚ್ಚು ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಇದು, ಪ್ಲಾಸ್ಟಿಕ್ ಸರ್ಜರಿ, ನರವಿಜ್ಞಾನ ಮತ್ತು ಸುಟ್ಟಗಾಯಗಳ ಚಿಕಿತ್ಸೆಯಂತಹ ವಿಶೇಷ ವಿಭಾಗಗಳಿಗೆ ರಾಜ್ಯದಲ್ಲಿಯೇ ಹೆಸರುವಾಸಿಯಾಗಿದೆ.

ಸಿಎಂ ದಾಖಲೆ ಬಜೆಟ್​

ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ (2026-27 ಸಾಲಿನ ರಾಜ್ಯ ಆಯವ್ಯಯ) ಕರ್ನಾಟಕ ಇತಿಹಾಸದಲ್ಲಿ ಒಂದು ಮಹತ್ವದ ಮೈಲುಗಲ್ಲಾಗಿದೆ. ಏಕೆಂದರೆ, ಯಾವುದೇ ಮುಖ್ಯಮಂತ್ರಿ ಇಷ್ಟೊಂದು ಬಾರಿ ಬಜೆಟ್ ಮಂಡಿಸಿಲ್ಲ.
ಸುಮಾರು 4.2 ರಿಂದ 4.5 ಲಕ್ಷ ಕೋಟಿ ಗಾತ್ರದ ಈ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ (ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ) ಮುಖ್ಯ ಆದ್ಯತೆ ನೀಡಲಾಗಿದ್ದು, ಆದಾಯ ಕೊರತೆ, ಜಿಎಸ್‌ಟಿ ಸುಧಾರಣೆಯಿಂದ ಉಂಟಾದ ನಷ್ಟ ಮತ್ತು ಹೆಚ್ಚುತ್ತಿರುವ ಖರ್ಚುಗಳ ನಡುವೆಯೂ ಮಹಿಳೆಯರು, ರೈತರು, ಯುವಕರು, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ (ವಿಶೇಷವಾಗಿ ಬೆಂಗಳೂರು ಮತ್ತು ಹಿಂದುಳಿದ ಪ್ರದೇಶಗಳು) ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net