ರಾಜ್ಯ ಬಜೆಟ್​ 2026: ಮೂಲ ಸೌಕರ್ಯ ಅಭಿವೃದ್ಧಿಗೆ 900 ಕೋಟಿ ಅನುದಾನ; ಆರೋಗ್ಯ ಇಲಾಖೆಗೆ ಬಜೆಟ್​ನಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಕಂಪ್ಲೀಟ್​ ಡೀಟೇಲ್ಸ್ | CM Siddaramaiah Budget

ಆರೋಗ್ಯ ಕ್ಷೇತ್ರ ಮೂಲಸೌಕರ್ಯ ಅಭಿವೃದ್ಧಿಗೆ ₹900 ಕೋಟಿ ಮೀಸಲು
ಆರೋಗ್ಯ ಕ್ಷೇತ್ರ ಮೂಲಸೌಕರ್ಯ ಅಭಿವೃದ್ಧಿಗೆ ₹900 ಕೋಟಿ ಮೀಸಲು
Published on

ಪ್ರಮುಖ ಮುಖ್ಯಾಂಶಗಳು

  • 2026-27ನೇ ಸಾಲಿನ ರಾಜ್ಯ ಬಜೆಟ್‌ ಘೋಷಣೆ
  • ಆರೋಗ್ಯ ಕ್ಷೇತ್ರ ಮೂಲಸೌಕರ್ಯ ಅಭಿವೃದ್ಧಿಗೆ ₹900 ಕೋಟಿ ಮೀಸಲು
  • ಆಸ್ಪತ್ರೆಗಳ ಉನ್ನತೀಕರಣಕ್ಕೆ ಹೊಸ ಯೋಜನೆಗಳ ಘೋಷಣೆ
ಬೆಂಗಳೂರು: ಶುಕ್ರವಾರ (ಮಾ.6) ಸಿಎಂ ಸಿದ್ದರಾಮಯ್ಯನವರು 2026-27 ನೇ ಸಾಲಿನ ಬಜೆಟ್​ನ್ನು ಮಂಡಿಸಿದ್ದು, ಇದು ಸಿದ್ದರಾಮಯ್ಯ (CM Siddaramaiah Budget) ಅವರು ಮಂಡಿಸಿದ 17 ನೇ ಬಜೆಟ್​ ಆಗಿದೆ. ಆರೋಗ್ಯ ಇಲಾಖೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 900 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಆಯುಷ್ಮಾನ್‌ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಹಾಲಿ ಚಾಲ್ತಿಯಲ್ಲಿರುವ 2018ರ ಚಿಕಿತ್ಸಾ ಪ್ಯಾಕೇಜ್‌ ದರಗಳನ್ನು ಪರಿಷ್ಕರಿಸಿ ಹೆಚ್.ಬಿ.ಪಿ.-2022 ಪ್ಯಾಕೇಜ್‌ ದರಗಳನ್ನು ಜಾರಿಗೆ ತರಲು ತೀರ್ಮಾನಿಸಿದೆ. ಇದರಿಂದ ಬಡರೋಗಿಗಳಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೌಲಭ್ಯ ಸಿಗಲಿದೆ. ಇದಕ್ಕಾಗಿ 400 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು.
ಸದರಿ ಯೋಜನೆಯನ್ನು ಯಶಸ್ವಿನಿ, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ರಾಜ್ಯ ವಿಮಾ ಯೋಜನೆ ಮತ್ತು ಅನ್ವಯಿಸುವ ಇತರ ಯೋಜನೆಗಳ ಅನುದಾನವನ್ನು ಒಗ್ಗೂಡಿಸುವ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದರು.

ಆರೋಗ್ಯ ಕ್ಷೇತ್ರಕ್ಕೆ ಭಾರಿ ಅನುಧಾನ

ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸಮಗ್ರ ಆಘಾತ ಆರೈಕೆ (Trauma Care) ಸೇವೆಗಳನ್ನು ಒದಗಿಸಲು ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಐಸಿಯುಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಸಾಧನಗಳನ್ನು ಹಂತ ಹಂತವಾಗಿ ಪೂರೈಸುವ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 45 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
ತೀವ್ರತರವಾದ ಅಪೌಷ್ಟಿಕತೆಯನ್ನು (Severe Acute Malnutrition) ಹೊಂದಿರುವ ಮಕ್ಕಳಿಗೆ ವೈದ್ಯಕೀಯ ಮತ್ತು ಪೌಷ್ಟಿಕಾಂಶದ ಚಿಕಿತ್ಸೆ ನೀಡಲು ಈಗಾಗಲೇ 86 ತಾಲ್ಲೂಕುಗಳಲ್ಲಿ ಪೌಷ್ಟಿಕ ಪುನಃಶ್ಚೇತನ ಕೇಂದ್ರಗಳು (NRC) ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಉಳಿದ 63 ತಾಲ್ಲೂಕುಗಳಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಕಡಿಮೆ ಜನನ ತೂಕದ ಹಾಗೂ ಅನಾರೋಗ್ಯ ಪೀಡಿತ ನವಜಾತ ಶಿಶುಗಳಿಗೆ ಅಗತ್ಯವಿರುವ ವಿಶೇಷ ಔಷಧೋಪಚಾರ, ಸಮಗ್ರ ನವಜಾತ ಶಿಶು ಆರೈಕೆ ಸೌಲಭ್ಯಗಳು ಹಾಗೂ ಪ್ರಸವಪೂರ್ವ ಸೇವೆಗಳನ್ನು ಮತ್ತಷ್ಟು ಬಲಪಡಿಸಲಾಗುವುದು. ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದಿದ್ದಾರೆ.

ಮಧುಮೇಹ ರೋಗಿಗಳಿಗೆ ಉನ್ನತ ಚಿಕಿತ್ಸೆ

ಟೈಪ್-1 ಮಧುಮೇಹದಿಂದ (Type-1 Diabetes) ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್ ಪೆನ್ಗಳನ್ನು ನೀಡಲಾಗುವುದು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲವರ್ಧನೆಗೊಳಿಸಲು KKRDB ವಾರ್ಷಿಕ ಸ್ಥಳೀಯ ಯೋಜನೆಯಲ್ಲಿ (micro plan) ಆದ್ಯತೆ ಮೇರೆಗೆ ಅನುದಾನವನ್ನು ಮೀಸಲಿರಿಸಲಾಗುವುದು ಎಂದು ಹೇಳಿದ್ದಾರೆ.
ಗಂಭೀರ, ದೀರ್ಘಕಾಲೀನ ಹಾಗೂ ಮಾರಣಾಂತಿಕ ಕಾಯಿಲೆಗಳೊಂದಿಗೆ ಬದುಕುತ್ತಿರುವ ರೋಗಿಗಳಿಗೆ ಕೇರಳ ಮಾದರಿಯಲ್ಲಿ ಗೃಹಾಧಾರಿತ ಉಪಶಮನ ಆರೈಕೆಯನ್ನು Pallium India ಸಂಸ್ಥೆಯ ಸಹಯೋಗದೊಂದಿಗೆ ನೀಡಲಾಗುವುದು. ರಾಜ್ಯದಲ್ಲಿ ಬೇಡಿಕೆ ಇರುವ 50 ಕೇಂದ್ರಗಳಲ್ಲಿ 150 ಹಾಸಿಗೆ ಸಾಮರ್ಥ್ಯ ಹೆಚ್ಚಿಸುವ ಮೂಲಕ ವಾರ್ಷಿಕವಾಗಿ 1.35 ಲಕ್ಷ ಡಯಾಲಿಸಿಸ್‌ ಸೇವೆಗಳನ್ನು ಒದಗಿಸಲಾಗುವುದು. ಇದಕ್ಕಾಗಿ 20 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಿಎಂ ದಾಖಲೆ ಬಜೆಟ್​

ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ (2026-27 ಸಾಲಿನ ರಾಜ್ಯ ಆಯವ್ಯಯ) ಕರ್ನಾಟಕ ಇತಿಹಾಸದಲ್ಲಿ ಒಂದು ಮಹತ್ವದ ಮೈಲುಗಲ್ಲಾಗಿದೆ. ಏಕೆಂದರೆ, ಯಾವುದೇ ಮುಖ್ಯಮಂತ್ರಿ ಇಷ್ಟೊಂದು ಬಾರಿ ಬಜೆಟ್ ಮಂಡಿಸಿಲ್ಲ.
ಸುಮಾರು 4.2 ರಿಂದ 4.5 ಲಕ್ಷ ಕೋಟಿ ಗಾತ್ರದ ಈ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ (ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ) ಮುಖ್ಯ ಆದ್ಯತೆ ನೀಡಲಾಗಿದ್ದು, ಆದಾಯ ಕೊರತೆ, ಜಿಎಸ್‌ಟಿ ಸುಧಾರಣೆಯಿಂದ ಉಂಟಾದ ನಷ್ಟ ಮತ್ತು ಹೆಚ್ಚುತ್ತಿರುವ ಖರ್ಚುಗಳ ನಡುವೆಯೂ ಮಹಿಳೆಯರು, ರೈತರು, ಯುವಕರು, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ (ವಿಶೇಷವಾಗಿ ಬೆಂಗಳೂರು ಮತ್ತು ಹಿಂದುಳಿದ ಪ್ರದೇಶಗಳು) ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net