ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಪಣತೊಡಿ

Commit to making the district tobacco-free
Commit to making the district tobacco-free
Published on
ರಾಮನಗರ: ತಂಬಾಕು ಉತ್ಪನ್ನ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಯುವ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಹಾಗೂ ಜಿಲ್ಲೆಯನ್ನು ತಂಬಾಕು ಮುಕ್ತವನ್ನಾಗಿಸಲು ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಸಮನ್ವಯ ಸಮಿತಿಯ ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಗಸ್ಟ್ 1ರಂದು ಡಾ. ಶ್ರೀ ಮಹಾಂತ್ ಶಿವಯೋಗಿ ಸ್ವಾಮೀಜಿ ಅವರ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಪ್ರತಿ ತಾಲೂಕಿನ ಕನಿಷ್ಠ 2 ರಿಂದ 3 ಶಾಲಾ-ಕಾಲೇಜುಗಳಲ್ಲಿ ಆರೋಗ್ಯ ಇಲಾಖೆ, ಆರಕ್ಷಕ ಇಲಾಖೆ, ಗ್ರಾಮ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಮನ್ವಯದೊಂದಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ಹಾನಿಕಾರಕ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿರುವ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಪ್ರತೀ ತಿಂಗಳಿಗೊಮ್ಮೆ ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಹೆಚ್ಚು ಐ.ಇ.ಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಈ ಮೂಲಕ ಜಿಲ್ಲೆಯನ್ನು ತಂಬಾಕು ಮುಕ್ತವನ್ನಾಗಿಸಲು ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯ ಪ್ರತಿ ಹೋಬಳಿಯ ತಲಾ ಒಂದು ಗ್ರಾಮವನ್ನು ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸುವ ಉದ್ದೇಶದಿಂದ ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕು ಪಂಚಾಯಿತಿಗಳ ಮೂಲಕ ಸೂಕ್ತ ಗ್ರಾಮಗಳನ್ನು ಗುರುತಿಸಿ ಪಟ್ಟಿಯನ್ನು ಜಿಲ್ಲಾ ತಂಬಾಕು ನಿಯಂತ್ರಣ ಕೋಶಕ್ಕೆ ಸಲ್ಲಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ರೆಸಾರ್ಟ್ ಹಾಗೂ ಹೋಂಸ್ಟೇಗಳಲ್ಲಿಯೂ ತಂಬಾಕು ಉತ್ಪನ್ನ ಮಾರಾಟವಾಗುವ ಬಗ್ಗೆ ಎಚ್ಚರ ವಹಿಸಬೇಕು ಹಾಗೂ ಅಲ್ಲಿಯೂ ದಾಳಿಯಂತಹ ಕಾರ್ಯಾಚರಣೆ ಹಮ್ಮಿಕೊಳ್ಳಬೇಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಜನಜಾಗೃತಿ ಅದರಲ್ಲೂ ಯುವ ಜನರಲ್ಲಿ ಅತೀ ಅಗತ್ಯವಾಗಿದೆ. ಆ ಕಾರಣಗಳಿಂದಾಗಿ ಹೆಚ್ಚು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶೇಖರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕಿರಣ್ ಶಂಕರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್, ತಾಲೂಕು ಆರೋಗ್ಯಾಧಿಕಾರಿಗಳು ಸೇರಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು
90 ಪ್ರಕರಣ ದಾಖಲು
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ 2026-27ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ನಿಗದಿಪಡಿಸಲಾಗಿದ್ದ 48 ಕೋಟ್ಪಾ ಕಾಯ್ದೆಯ ಕಾರ್ಯಾಚರಣೆಯಲ್ಲಿ ಜಿಲ್ಲೆಯಲ್ಲಿ ಇದೂವರೆಗೂ 13 ಕಾರ್ಯಾಚರಣೆ, 90 ಕೋಟ್ಪಾ ಕಾಯ್ದೆ ಉಲ್ಲಂಘನೆಯ ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟು 17,400 ರೂ.ಗಳ ದಂಡ ವಿಧಿಸಲಾಗಿದೆ. ಅದೇ ರೀತಿಯಲ್ಲಿ ಪ್ರತೀ ತಾಲೂಕುಗಳಿಗೆ ಮಾಸಿಕವಾಗಿ ಕನಿಷ್ಠ 4 ಕೋಟ್ಪಾ ಕಾಯ್ದೆ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲು ಮಾಡಿ ದಂಡ ವಿಧಿಸುವಂತೆ ಅವರು ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಸೂಚಿಸಿದರು.
ಮಳಿಗೆ ಪರವಾನಿಗೆ ರದ್ದತಿಗೆ ಕ್ರಮ
ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳನ್ನು ಅಧಿಕೃತವಾಗಿ ಮಾರಾಟ ಮಾಡಲು ಟೊಬ್ಯಾಕೊ ವೆಂಡರ್ ಲೈಸೆನ್ಸ್ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಅದರಂತೆ ಜಿಲ್ಲೆಯ ಪ್ರತೀ ತಾಲೂಕಿನಲ್ಲಿ ಪ್ರತಿ ತಿಂಗಳು ಕನಿಷ್ಠ 25 ಪರವಾನಗಿ ನೀಡಬೇಕು. ಪರವಾನಗಿ ಇಲ್ಲದೆ ತಂಬಾಕು ಉತ್ಪನ್ನ ಮಾರಾಟ ಮಾಡಿದರೆ ದಂಡ ವಿಧಿಸಲಾಗುವುದು. ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ಕೋಟ್ಪಾ ಕಾರ್ಯಾಚರಣೆ ಕೈಗೊಂಡು ಟೊಬ್ಯಾಕೊ ವೆಂಡರ್ ಲೈಸೆನ್ಸ್ ಪಡೆಯದೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ-ಮಳಿಗೆಗಳ ಮೇಲೆ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿ ಸಂಬಂಧಿಸಿದ ಮಳಿಗೆಯ ವ್ಯಾಪಾರ ಪರವಾನಿಗೆ ರದ್ದು ಮಾಡಲು ಕ್ರಮ ವಹಿಸಬೇಕೆಂದು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ತಾಕೀತು ಮಾಡಿದರು.
(21-07-ರಾಮ-ತಂಬಾಕು)
ಎಡಿಸಿ ಆರ್.ಚಂದ್ರಯ್ಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಯಿತು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶೇಖರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕಿರಣ್ ಶಂಕರ್ ಮುಂತಾದವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net