ಬಸವಕಲ್ಯಾಣ ತಾಲೂಕಿನ ಧನ್ನೂರ(ಕೆ) ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ರೈತ ಭವನ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ಶಾಸಕ ಶರಣು ಸಲಗರ ಭೇಟಿ ನೀಡಿ ಪರಿಶೀಲಿಸಿ ಕೆಎನ್ಎನ್ಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಕಾಲ್ ಮಾಡಿ ಮಾಹಿತಿ ನೀಡಿದರು.
ಬಸವಕಲ್ಯಾಣ: ತಾಲೂಕಿನ ಧನ್ನೂರ(ಕೆ) ಗ್ರಾಮದಲ್ಲಿ ನನೆಗುದಿಗೆ ಬಿದ್ದಿರುವ ರೈತ ಭವನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಶಾಸಕ ಶರಣು ಸಲಗರ ಸೂಚಿಸಿದರು.
ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದ ನಂತರ 2020&21ನೇ ಸಾಲಿನಲ್ಲಿ ಕೈಗೆತ್ತಿಕೊಂಡ ರೈತ ಭವನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಕೆಎನ್ಎನ್ಎಲ್ನ ವ್ಯವಸ್ಥಾಪಕ ನಿರ್ದೇಶಕ ಅಮೀನ್ಭಾವಿ ಅವರಿಗೆ ವಿಡಿಯೋ ಕಾಲ್ ಮಾಡಿ ಅರ್ಧಕ್ಕೆ ನಿಂತ ಕಾಮಗಾರಿಗೆ ಅಗತ್ಯ ಅನುದಾನ ಒದಗಿಸಿ ಕೆಲಸ ಮುಗಿಸಬೇಕು ಎಂದು ತಿಳಿಸಿದರು.
ಈ ಭಾಗದ ರೈತ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಸುಮಾರು 7.50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಮತ್ತು ಅತ್ಯಾಧು ನಿಕ ರೈತ ಭವನ ನಿರ್ಮಿಸಲಾಗುತ್ತಿದೆ. ಈಗಾಗಲೇ 90ರಷ್ಟು ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಫ್ಲೋರಿಂಗ್, ಕಿಟಕಿ ಮತ್ತು ವಿದ್ಯುತ್ ತಂತಿ ಅಳವಡಿಕೆ ಸೇರಿ ಸಣ್ಣಪುಟ್ಟ ಬಾಕಿ ಉಳಿದ ಕೆಲಸ ಮಾಡಲು ಇನ್ನೂ 90 ಲಕ್ಷ ರೂ.ಅನುದಾನದ ಅಗತ್ಯವಿದೆ. ಇದನ್ನು ನೀಡಿ ಕೆಲಸ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಬೇಕಾದ 1 ಕೋಟಿ ರೂ. ತಕ್ಷಣ ಮಂಜೂರು ಮಾಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇನೆ ಎಂದು ತಿಳಿಸಿದರು.