ಶಹಾಪುರ: ವಿದ್ಯಾರ್ಥಿಗಳ ವಸತಿ ನಿಲಯದ ಕಟ್ಟಡ ಕಾಮಗಾರಿ ಗುಣಮಟ್ಟ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ತಾಲೂಕಿನ ಸಗರ ಗ್ರಾಮದಲ್ಲಿ ರಾಜ್ಯ ಸರ್ಕಾರದ ಅಲ್ಪ ಸಂಖ್ಯಾತರ ಇಲಾಖೆಯಿಂದ ಒಟ್ಟು 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮುರಾರ್ಜಿ ದೇಸಾಯಿ ವಿದ್ಯಾರ್ಥಿ ನಿಲಯದ ಕಾಮಗಾರಿಯನ್ನು ಶನಿವಾರ ಪರಿಶೀಲಿಸಿ ಮಾತನಾಡಿದ ಅವರು, ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
6.50 ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ಮತ್ತು 2.50 ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯದ ಸುತ್ತುಗೋಡೆ ನಿರ್ಮಿಸಲಾಗುತ್ತಿದ್ದು, ಕೆಲವೇ ತಿಂಗಳಲ್ಲಿ ಕಾಮಗಾರಿ ಮುಗಿದು ಲೋಕಾರ್ಪಣೆಗೊಳ್ಳಲಿದೆ ಎಂದರು.
ಮತಕ್ಷೇತ್ರದ ವ್ಯಾಪ್ತಿಯಲ್ಲಿ ಎಲ್ಲಿ ವಸತಿ ನಿಲಯಗಳಿಗೆ ಸ್ವಂತ ಕಟ್ಟಡ ಇಲ್ಲವೋ ಅವುಗಳ ಪಟ್ಟಿ ಕೋಡಿ, ಬರುವ ದಿನಗಳಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ವಸತಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡುವ ಮೂಲಕ ಬಡವರ ಮಕ್ಕಳು ಸಹ ಉತ್ತಮ ಸೌಲಭ್ಯ ಪಡೆದು ಉನ್ನತ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.
ಈಗಿರುವ ವಸತಿ ನಿಲಯಗಳಲ್ಲಿ ಅಗತ್ಯ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಿ, ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಿ, ಕಾಲ, ಕಾಲಕ್ಕೆ ವೈದ್ಯರಿಂದ ಮಕ್ಕಳ ಆರೋಗ್ಯ ತಪಾಸಣೆ ಮಾಡಿ, ಅವರಿಗೆ ಸೂಕ್ತ ರಕ್ಷಣೆ ನೀಡಿ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ತಾಲೂಕಿನ ರಸ್ತಾಪುರ ಗ್ರಾಮಕ್ಕೆ ತೆರಳಿದ ಅವರು, ಅಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಡಿನ ನಿರ್ಮಾಣಗೊಳ್ಳುತ್ತಿರುವ ಹತ್ತು ಶಾಲಾ ಕೋಣೆಗಳ ಕಾಮಗಾರಿ ಪರಿಶೀಸಿದರು. ಸುಸಜ್ಜಿತವಾದ ಕೋಣೆಗಳ ನಿರ್ಮಾಣದ ಜತೆಗೆ ಸುತ್ತುಗೋಡೆ, ಮಕ್ಕಳಿಗೆ ಕುಡಿಯುವ ನೀರು ಮತ್ತು ಶೌಚಗೃಹದ ವ್ಯವಸ್ಥೆ ಕಡ್ಡಾಯವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದರು.
ಶಹಾಪುರ ಮತಕ್ಷೇತ್ರದಲ್ಲಿರುವ ಶಾಲಾ ಕಟ್ಟಡಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಅವರು, ಅಗತ್ಯವಿದ್ದಲ್ಲಿ ದುರಸ್ತಿ, ಸುಣ್ಣ, ಬಣ್ಣ ಮಾಡಿಸಿ, ಏನೇ ಸೌಲಭ್ಯ ಬೇಕಾದರೂ ತಮ್ಮ ಗಮನಕ್ಕೆ ತನ್ನಿ, ಅವುಗಳನ್ನು ಮಾಡಿಕೊಡಲಾಗುವುದು ಎಂದು ಹೇಳಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯ ಶಿವಮಂತಪ್ಪ ಸಾಹು, ಕಾಂಗ್ರೆಸ್ ಯುವ ಮುಖಂಡ ಬಸ್ಸುಗೌಡ ಬಿಲ್ಹಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿದ್ದರು.
"
ಕಳೆದ ಮೂರು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸಿದ್ದು, ಇನ್ನೂ ಎರಡು ವರ್ಷ ಸಮಯವಿದೆ. ಈ ಅವಧಿಯಲ್ಲೂ ಶಹಾಪುರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಮತದಾರರ ವಿಶ್ವಾಸ ಉಳಿಸಿಕೊಂಡು ಋಣ ತೀರಿಸುವೆ.