ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಸತೀಶ್ ಜಾರಕಿಹೊಳಿ, ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ. ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಶಾಸಕರ ನೇತೃತ್ವದ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಅಧಿನಿಯಮ 2022ರಡಿ ಪರಿಶಿಷ್ಟ ಜಾತಿಯವರಿಗೆ ಶೇ.17 ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.7 ಹೆಚ್ಚಿಸಲಾದ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗೆ ನಿಯೋಗ ಒತ್ತಾಯ ಮಾಡಿದೆ.
ಹೈಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳ ಹಿನ್ನೆಲೆಯಲ್ಲಿ ಹೆಚ್ಚಿಸಲಾದ ಮೀಸಲಾತಿ ಅನುಷ್ಠಾನಕ್ಕೆ ಉಂಟಾಗಿರುವ ತಾತ್ಕಾಲಿಕ ಅಡಚಣೆಯನ್ನು ನಿವಾರಿಸಲು ಸರ್ಕಾರ ಹಿರಿಯ ವಕೀಲರನ್ನು ನೇಮಕ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಪರವಾಗಿ ಹಿರಿಯ ಕಾನೂನು ತಜ್ಞ ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಿಸಬೇಕು. ಸಮರ್ಥವಾಗಿ ವಾದ ಮಂಡಿಸಿ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.
ರಾಜ್ಯ ಸರ್ಕಾರದಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲು ಮತ್ತು ವಿಶ್ವವಿದ್ಯಾಲಯಗಳ ಉಪಕುಲಪತಿ ನೇಮಕಾತಿಗಳಲ್ಲಿ ಅರ್ಹ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು. ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಪರಿಶಿಷ್ಟ ಪಂಗಡದವರಿಗೆ ಮೂರು ಸಚಿವ ಸ್ಥಾನ ನೀಡಲಾಗಿತ್ತು. ಆದ್ದರಿಂದ ಬಾಕಿ ಇರುವ ಎರಡು ಸ್ಥಾನಗಳನ್ನು ಹೊಸದಾಗಿ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಮನವಿ ಮಾಡಿರುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.
ನಿಯೋಗದಲ್ಲಿ ಶಾಸಕರಾದ ಬಸನಗೌಡ ದದ್ದಲ್, ಟಿ. ರಘುಮೂರ್ತಿ, ಡಾ. ಶ್ರೀನಿವಾಸ, ಜೆ.ಎನ್. ಗಣೇಶ್ ಮಾಜಿ ಸಂಸದರಾದ ದೇವೇಂದ್ರಪ್ಪ, ಬಿ.ಎನ್.ಚಂದ್ರಪ್ಪ ಸೇರಿ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.