ಸರ್ಕಾರಿ ನೌಕರರೆಂದು ಘೋಷಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ ಚವ್ಹಾಣ, ಮಾರುತಿ ದಾಸರ, ಶಂಕರ ಕಟಗೇರಿ, ಹನಮಂತ ಮಜ್ಜಗಿ ಇತರರಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ ಚವ್ಹಾಣ, ಮಾರುತಿ ದಾಸರ, ಶಂಕರ ಕಟಗೇರಿ, ಹನಮಂತ ಮಜ್ಜಗಿ ಇತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಗ್ರಾ.ಪಂ. ನೌಕರ ಸಂಘದಿಂದ ಪ್ರತಿಭಟನೆ
  • ವಿವಿಧ ಬೇಡಿಕೆ ಈಡೇರಿಕೆಗೆ ಮನವಿ
ಬಾಗಲಕೋಟೆ: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ ವಸೂಲಿಗಾರ, ಡಾಟಾ ಎಂಟ್ರಿ ಆಪ್‌ರೇಟರ್, ನೀರುಗಂಟಿ, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರು ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಶನಿವಾರ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ಮಾಡಿದರು.
ಸೇವಾ ಹಿರಿತನ ಪರಿಗಣಿಸಿ ಇನ್‌ಕ್ರಿಮೆಂಟ್ ನೀಡಬೇಕು. ಕೆಲಸ ನಿರ್ವಹಿಸುತ್ತಿರುವ ನೌಕರರು ನಿವೃತ್ತಿ ಅಥವಾ ಮರಣ ಹೊಂದಿದರೆ 6 ಸಾವಿರ ರೂ. ಇಡಗಂಟು ಕೊಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಠರಾವು ಮೂಲಕ ನೇಮಕಾತಿಯಾಗಿರುವವರಿಗೂ ಇಡಗಂಟು ನೀಡಬೇಕು ಎಂದು ಆಗ್ರಹಿಸಿದರು.
ತರಬೇತಿ ಪಡೆದಿರುವ ಎಲ್ಲ ಸ್ವಚ್ಛವಾಹಿನಿ ನೌಕರರಿಗೆ ಕೆಲಸ ನೀಡಬೇಕು. ಒಪ್ಪಂದ ಪತ್ರ ಮತ್ತು ಪ್ರತಿ ವಷರ್ದ ನವೀಕರಣ ರದ್ದುಪಡಿಸಬೇಕು ಎಂದು ಆಗ್ರಹಿಸಿದರು. 15ನೇ ಹಣಕಾಸಿನಲ್ಲಿ ವೇತನ ಪಾವತಿ ಮಾಡಬೇಕು. ಪ್ರತಿಯೊಂದು ಪಂಚಾಯಿತಿಗೆ ಒಬ್ಬರೇ ಚಾಲಕರೆಂದು ಪರಿಗಣಿಸಿ 15 ಸಾವಿರ ರೂ. ವೇತನ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಡಾಟಾ ಎಂಟ್ರಿ ಆಪ್‌ರೇಟರ್‌ಗಳನ್ನು ಮುಂದುವರಿಸಬೇಕು. ಈಗಾಗಲೇ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರು ಕಂಪ್ಯೂಟರ್ ಜ್ಞಾನ ಹಾಗೂ ವಿದ್ಯಾರ್ಹತೆ ಹೊಂದಿದ್ದರೆ ಅಂತಹವರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಆದಾಯಕ್ಕೆ ಅನುಗುಣವಾಗಿ ಕರ ವಸೂಲಿಗಾರರ ಹುದ್ದೆಗಳನ್ನು ನಿಗದಿ ಮಾಡಬೇಕು. 2017ರೊಳಗೆ ಇರುವ ಹೆಚ್ಚುವರಿ ಕರ ವಸೂಲಿಗಾರರಿಗೆ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಮೊದಲನೇ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಕ್ಲರ್ಕ್ ಹುದ್ದೆ ತೆರವಾದ ನಂತರ ಅನುಮೋದನೆ ನೀಡಬೇಕೆಂಬ ಷರತ್ತನ್ನು ಕೈಬಿಟ್ಟು ಅನುಮೋದನೆ ನೀಡಲು ಅವಕಾಶ ನೀಡಬೇಕು ಎಂದು ಕೋರಿದರು. ಪಂಚಾಯಿತಿಗಳಲ್ಲಿ ಖಾಲಿ ಇರುವ ಕರ ವಸೂಲಿಗಾರ, ನೀರುಗಂಟಿ ಮುಂದಾದ ಹುದ್ದೆಗಳನ್ನು ಭರ್ತಿ ಮಾಡಬೇಕು. ಲೆಕ್ಕ ಸಹಾಯಕ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಆಗ್ರಹಿಸಿದರು.
ಬಿಲ್ ಕಲೆಕ್ಟರ್ ಮತ್ತು ಗುಮಾಸ್ತ ವೃಂದದಿಂದ ಗ್ರೇಡ್ 2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕಗೊಂಡ ನೌಕರರಿಗೆ ಹಿಂದಿನ ಸೇವೆ ಪರಿಗಣಿಸಿ ಹಳೆ ಪಿಂಚಣಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಶೇ. 60ರಷ್ಟು ಸ್ಥಾನವನ್ನು ಗ್ರೇಡ್-1 ಕಾರ್ಯದರ್ಶಿಗಳಿಗೆ ನೀಡಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ ಚವ್ಹಾಣ, ಮಾರುತಿ ದಾಸರ, ಶಂಕರ ಕಟಗೇರಿ, ಹನಮಂತ ಮಜ್ಜಗಿ ಮತ್ತಿತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net