ಬೆಳಗಾವಿ: ಮಹಾರಾಷ್ಟ್ರದಲ್ಲಿ ಕನ್ನಡ ಶಿಕ್ಷಕರು ಕಡ್ಡಾಯವಾಗಿ ಮರಾಠಿ ಭಾಷೆಯಲ್ಲೇ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯುವಂತೆ ನಿಯಮ ಜಾರಿಗೊಳಿಸಿದ್ದರಿಂದ ತೊಂದರೆಯಾಗುತ್ತಿದ್ದು, ಕೂಡಲೇ ಕರ್ನಾಟಕ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಮುಖ್ಯಮಂತ್ರಿ ಡಿ.ಕೆ.ಶಿವಕುಮಾರಗೆ ಮನವಿ ಸಲ್ಲಿಸಿದೆ.
ಸುವರ್ಣ ವಿಧಾನ ಸೌಧದಲ್ಲಿ ಅಹವಾಲು ಸಲ್ಲಿಸಿದ ಕರವೇ ಕಾರ್ಯಕರ್ತರು, ಮಹಾ ರಾಷ್ಟ್ರ ಹಾಗೂ ಕೇಂದ್ರ ಸರ್ಕಾರದ ಸಂಬಂಧಿತ ಇಲಾಖೆಗಳೊಂದಿಗೆ ಉನ್ನತ ಮಟ್ಟದಲ್ಲಿ ಚರ್ಚಿಸಬೇಕು. ಮಹಾರಾಷ್ಟ್ರ ರಾಜ್ಯದ ಕನ್ನಡ ಮಾಧ್ಯಮ ಶಿಕ್ಷಕರಿಗೆ ಕನ್ನಡ ಭಾಷೆಯಲ್ಲೇ ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲು ಅವಕಾಶ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕರ್ನಾಟಕದಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಎಂಇಎಸ್ ಸಂಘಟನೆ ನಾಯಕರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಸುವರ್ಣ ವಿಧಾನಸೌಧದಕ್ಕೆ ರಾಜ್ಯ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಿ, ಶಕ್ತಿ ಕೇಂದ್ರವಾಗಿ ಪರಿವರ್ತಿಸಬೇಕು ಎಂದು ಒತ್ತಾಯಿಸಿದರು.