ರಾಜ್ಯ ರಾಜಕಾರಣದಲ್ಲಿ ಚತುರ ನಡೆಗಳ ನಾಯಕ, ಟ್ರಬಲ್ ಶೂಟರ್ ಎಂದೇ ಖ್ಯಾತರಾದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಕೊನೆಗೂ ಮುಖ್ಯಮಂತ್ರಿ ಗದ್ದುಗೆಯನ್ನು ಏರುತ್ತಿದ್ದಾರೆ. ಸತತ ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಬಹುಕಾಲದ ಕನಸು ಇಂದು (ಜೂನ್ 3) ನನಸಾಗುತ್ತಿದೆ.
ಮೇ 30 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಅವರು, ಇಂದು ಅಧಿಕೃತವಾಗಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ, ಇಂದು ಸಂಜೆ ಸರಿಯಾಗಿ 4:05 ಗಂಟೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಅವರೊಂದಿಗೆ ಕೆಲ ಸಚಿವರೂ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಂಗಳವಾರವೇ (ಜೂನ್ 2) ಲೋಕ ಭವನದಲ್ಲಿ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದವು. ರಾಜ್ಯದ ಮೂಲೆ ಮೂಲೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಬೆಂಗಳೂರಿಗೆ ಹರಿದು ಬರುತ್ತಿರುವುದರಿಂದ ನಗರದಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮಾರಂಭವನ್ನು ವ್ಯವಸ್ಥಿತವಾಗಿ ಆಯೋಜಿಸಲಾಗಿದೆ (ಏಜೆನ್ಸೀಸ್).