ಸಿಎಂ ಆಗಿ ಜೂನ್ 1ಕ್ಕೆ ಡಿಕೆಶಿ ಪ್ರಮಾಣ ವಚನ ಸ್ವೀಕಾರ; ಖರ್ಗೆ, ರಾಹುಲ್, ಪ್ರಿಯಾಂಕಾ ಭಾಗಿ ಸಾಧ್ಯತೆ! | DK Shivakumar Oath Taking

 DK Shivakumar Oath Taking | ಸಿಎಂ ಆಗಿ ಜೂನ್ 1ಕ್ಕೆ ಡಿಕೆಶಿ ಪ್ರಮಾಣ ವಚನ ಸ್ವೀಕಾರ (ಸಂಗ್ರಹ ಚಿತ್ರ)
DK Shivakumar Oath Taking | ಸಿಎಂ ಆಗಿ ಜೂನ್ 1ಕ್ಕೆ ಡಿಕೆಶಿ ಪ್ರಮಾಣ ವಚನ ಸ್ವೀಕಾರ (ಸಂಗ್ರಹ ಚಿತ್ರ)
Published on
ಬೆಂಗಳೂರು: ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯಕ್ಕೆ ವೇದಿಕೆ ಸಿದ್ಧವಾಗಿದ್ದು, ಮುಂದಿನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಅಧಿಕಾರದ ಚುಕ್ಕಾಣಿ ಹಿಡಿಯುವುದು ಈಗ ಬಹುತೇಕ ಖಚಿತವಾಗಿದೆ. ಸಿಎಂ ಹುದ್ದೆಗೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ತೆರವಾಗಿದ್ದ ಸ್ಥಾನಕ್ಕೆ ಡಿಕೆಶಿ ಅವರ ಹೆಸರನ್ನೇ ಹೈಕಮಾಂಡ್ ಬಹುತೇಕ ಅಂತಿಮಗೊಳಿಸಿದೆ.
ಉನ್ನತ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಮುಂಬರುವ ಸೋಮವಾರ (ಜೂನ್ 1) ವಿಧಾನಸೌಧದ ಮುಂಭಾಗದಲ್ಲಿ ಡಿ ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಲಿದ್ದು, ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸುವ ಸಾಧ್ಯತೆಗಳಿವೆ.
ಗುರುವಾರ ನಡೆದ ಸಚಿವರು ಮತ್ತು ಶಾಸಕರ ಮಹತ್ವದ ಸಭೆಯಲ್ಲಿ ಸ್ವತಃ ಸಿದ್ದರಾಮಯ್ಯ ಅವರೇ ಡಿ ಕೆ ಶಿವಕುಮಾರ್ ಅವರ ಹೆಸರನ್ನು ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಮುನ್ನೆಲೆಗೆ ತಂದು ಬೆಂಬಲಿಸಿದ್ದಾರೆ ಎಂದು ಸಚಿವರೊಬ್ಬರು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೆ, ಪಕ್ಷದ ಎಲ್ಲಾ ನಾಯಕರು ಹಾಗೂ ಶಾಸಕರು ಡಿಕೆಶಿ ಅವರಿಗೆ ಮುಂಬರುವ ದಿನಗಳಲ್ಲಿ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಈ ಸಭೆಯಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಶನಿವಾರ (ಮೇ 30) ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಿಗದಿಯಾಗಿರುವ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ, ಡಿ.ಕೆ. ಶಿವಕುಮಾರ್ ಅವರನ್ನೇ ನೂತನ ನಾಯಕನನ್ನಾಗಿ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮೂಲಕ ಈ ಕುರಿತು ಒಂದು ಸಾಲಿನ ನಿರ್ಣಯವನ್ನು ಅಂಗೀಕರಿಸುವಂತೆ ಶಾಸಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎನ್ನಲಾಗಿದ್ದು, ಇದೇ ಸಭೆಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುತ್ತಿರುವ ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಪಕ್ಷದ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net