ಚಿಮ್ಮಡ ಗ್ರಾಮ ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಪಿಡಿಒ ಶಿವಾನಂದ ಬಿರಾದಾರ ಚಾಲನೆ ನೀಡಿದರು. ತೇರದಾಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಪೂಜಾರಿ, ವಿಸರ್ಜಿತ ಗ್ರಾಮ ಪಂಚಾಯಿತಿ ಸದಸ್ಯ ನಾಗಪ್ಪ ಆಲಕನೂರ, ಸದಸ್ಯೆ ಮಂಜುಳಾ ದೊಡವಾಡ, ಮಾಜಿ ಉಪಾಧ್ಯಕ್ಷ ಪೀರಸಾಬ ನದಾಫ್, ರಘು ಬಜಂತ್ರಿ, ನಾಗಯ್ಯ ಮಠಪತಿ, ರವೀಂದ್ರ ದೊಡವಾಡ ಇತರರಿದ್ದರು.
ಚಿಮ್ಮಡ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಮತ್ತು ದುರ್ಬಲ ವರ್ಗದ ಜನರ ಆರ್ಥಿಕ ಸಬಲೀಕರಣಕ್ಕೆ ಪರಿಣಾಮಕಾರಿ ನೆರವಾಗಿವೆ ಎಂದು ಗ್ರಾಮ ಪಂಚಾಯಿತಿ ಅಭಿವದ್ಧಿ ಅಧಿಕಾರಿ ಶಿವಾನಂದ ಬಿರಾದಾರ ಹೇಳಿದರು.
ಸ್ಥಳೀಯ ಗ್ರಾಮ ಪಂಚಾಯಿತಿ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಪರ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗತಿ ಮೂಡಿಸುವ ಉದ್ದೇಶದಿಂದ ಪರಿಸರ ಸಂರಕ್ಷಣೆಯ ಸಂದೇಶದೊಂದಿಗೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ತೇರದಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಪೂಜಾರಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳನ್ನು ಆರಂಭದಲ್ಲಿ ಟೀಕಿಸಿದ್ದ ವಿರೋಧ ಪಕ್ಷಗಳೇ ಬಳಿಕ ಅವುಗಳ ಜನಪ್ರಿಯತೆಯನ್ನು ಗಮನಿಸಿ ತಮ್ಮ ರಾಜ್ಯಗಳಲ್ಲೂ ಜಾರಿಗೊಳಿಸಿರುವುದು ಯೋಜನೆಗಳ ಮಹತ್ವವನ್ನು ತೋರಿಸುತ್ತದೆ ಎಂದರು. ಈ ಯೋಜನೆಗಳಿಂದ ಬಡ, ದೀನದಲಿತ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸಿದೆ ಎಂದು ಹೇಳಿದರು.