ಭಾಲ್ಕಿ: ಜಿಲ್ಲೆಯಲ್ಲಿ ಕೇಂದ್ರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರ ಜೀವನ ಮಟ್ಟ ಸುಧಾರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.
ತಾಲೂಕಿನ ಮರೂರ ಗ್ರಾಮದಲ್ಲಿ ಬುಧವಾರ ಜಲಜೀವನ್ ಮಿಷನ್ ಮತ್ತು ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ 73 ಲಕ್ಷ ರೂ. ಅನುದಾನದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಸಂಸದನಾದ ಮೇಲೆ ವಿವಿಧ ಕೇಂದ್ರದ ಹಲವು ಯೋಜನೆಗಳಿಗೆ ಚುರುಕು ಮುಟ್ಟಿಸುವ ಪ್ರಯತ್ನ ಮಾಡುತ್ತಿದ್ದೇನೆ. ಜಿಲ್ಲೆಯ ಎಲ್ಲ ಹಳ್ಳಿಗಳಲ್ಲಿ ಜೆಜೆಎಂ ಯೋಜನೆ ಅನುಷ್ಠಾನಗೊಳಿಸಿ ಗ್ರಾಮೀಣ ಭಾಗದಲ್ಲಿನ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆ ಹರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಮರೂರ ಗ್ರಾಮದಲ್ಲಿ 73 ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು. ಸ್ಥಳಿಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.