ಸಮಾಜದ ಅನಿಷ್ಟ ಪಿಡುಗು ಹೋಗಲಾಡಿಸಿ

ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಆಚರಣೆಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಉದ್ಘಾಟಿಸಿದರು. ಕಾರ್ಮಿಕ ಅಧಿಕಾರಿ ರಮೇಶ ಎಸ್. ಸುಂಬಡ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಇತರರಿದ್ದಾರೆ.
ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಆಚರಣೆಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಉದ್ಘಾಟಿಸಿದರು. ಕಾರ್ಮಿಕ ಅಧಿಕಾರಿ ರಮೇಶ ಎಸ್. ಸುಂಬಡ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಇತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ನ್ಯಾಯಾಧೀಶ ಹರೀಶ ಎ. ಅಭಿಮತ
  • ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ
ವಿಜಯಪುರ: ಸಮಾಜದಲ್ಲಿನ ಅನಿಷ್ಟ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಅವರು ಹೇಳಿದರು.
ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ಮತ್ತು ಬಾಲ್ಯ ವಿವಾಹದ ಕುರಿತು ಜನರಲ್ಲಿ ಸೂಕ್ತ ತಿಳಿವಳಿಕೆ ಹಾಗೂ ಕಾನೂನಿನ ಜಾಗೃತಿ ಹೊಂದುವುದು ಅಗತ್ಯವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಹಕ್ಕುಗಳ ಕುರಿತಾಗಿ ಸೂಕ್ತ ಅರಿವು ಮೂಡಿಸಬೇಕು. ಈ ಬಗ್ಗೆ ಜಾಗೃತಿ ಹಾಗೂ ಸಹಕಾರ ನೀಡಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಾ ಸಿದ್ಧವಾಗಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ ಮಾತನಾಡಿ, ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಇರುವ ಕಾನೂನಾತ್ಮಕ ಕ್ರಮಗಳ ಕುರಿತು ವಿವರಿಸಿದರು.
ಬಾಲಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ ಪ್ರತಿ ತಿಂಗಳು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡದೊಂದಿಗೆ ಅನಿರೀಕ್ಷಿತ ದಾಳಿ ಕೈಗೊಂಡು ಮಕ್ಕಳನ್ನು ರಕ್ಷಿಸಿ ಪ್ರಕರಣ ದಾಖಲಿಸಿ ತಪ್ಪಿತಸ್ಥ ಮಾಲೀಕರಿಂದ ಕಾರ್ಪಸ್ ನಿಧಿ ವಸೂಲಿ ಮಾಡಲು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲ ಇಲಾಖೆಗಳ ಸಹಕಾರದ ಅಗತ್ಯವಿದೆ. ಇಲಾಖೆಯ ಕಾರ್ಯವೈಖರಿಯೊಂದಿಗೆ ಬಾಲಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕಲು ಎಲ್ಲ ಇಲಾಖೆಗಳ ಹಾಗೂ ಸಾರ್ವಜನಿಕರ ಸಹಕಾರದ ಅಗತ್ಯವಿದೆ ಎಂದರು.
ಕಾರ್ಮಿಕ ಅಧಿಕಾರಿ ರಮೇಶ ಎಸ್. ಸುಂಬಡ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ನಿರ್ಮಲಾ ಎಚ್. ಸುರಪುರ ಮಾತನಾಡಿದರು. ಫಾದರ್ ಸುಮನ್ ಬಾಲು ಅವರು ಉಪನ್ಯಾಸ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಕಾಳೆ, ಕಾರ್ಮಿಕ ನಿರೀಕ್ಷಕಿ ಜಗದೇವಿ ಸಜ್ಜನ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಮಹಾದೇವಿ ರಾಠೋಡ, ಕಾರ್ಮಿಕ ನಿರೀಕ್ಷಕಿ ಜಗದೇವಿ ಸಜ್ಜನ, ಕಾರ್ಮಿಕ ನಿರೀಕ್ಷಕ ಮಲ್ಲಿಕಾರ್ಜುನ ಇತರರಿದ್ದರು.
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭವಾದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಜಾಥಾಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಅವರು ಹಸಿರು ನಿಶಾನೆ ತೋರಿದರು. ನಗರದ ಪ್ರಮುಖ ಮಾರ್ಗಗಳಲ್ಲಿ ಜಾಥಾ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net