ಮುಧೋಳ: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಸಾರಿಗೆ ಸಂಪರ್ಕದ ಕೊರತೆ ಯಾವುದೇ ಕಾರಣಕ್ಕೂ ಅಡ್ಡಿಯಾಗಬಾರದು. ಮಕ್ಕಳ ಭವಿಷ್ಯ ಸುಗಮವಾಗಿ ಯಾವುದೇ ತೊಂದರೆಯಿಲ್ಲದೆ ಶಾಲೆ-ಕಾಲೇಜ್‌ಗಳನ್ನು ತಲುಪಬೇಕು ಎಂಬ ಸದುದ್ದೇಶದಿಂದ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗಾಗಿ ಉಚಿತ ಬಸ್ ಪಾಸ್ ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ ಎಂದು ಶಾಸಕ ಆರ್.ಬಿ. ತಿಮ್ಮಾಪೂರ ತಿಳಿಸಿದರು.
ನಗರದ ಬಸ್ ನಿಲ್ದಾಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಿಂದ ನಗರಕ್ಕೆ ಬರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ವರದಾನವಾಗಿದೆ ಎಂದರು.
ವಿದ್ಯಾರ್ಥಿಗಳ ಆರ್ಥಿಕ ಹೊರೆ ಕಡಿಮೆ ಮಾಡುವುದು ಮತ್ತು ಅವರನ್ನು ಶಿಕ್ಷಣದತ್ತ ಉತ್ತೇಜಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು, ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಹಾರೈಸಿದರು.
ಮುಧೋಳ ಸಾರಿಗೆ ಘಟಕದ ವ್ಯವಸ್ಥಾಪಕಿ ವಿದ್ಯಾ ನಾಯಕ ಮಾತನಾಡಿ, ಸಾರಿಗೆ ಇಲಾಖೆ ವಿದ್ಯಾರ್ಥಿಗಳ ಸಮಯ ಪಾಲನೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಶೈಕ್ಷಣಿಕ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯದ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು.
ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಕೀಲ ಅಶೋಕ ಕಿವಡಿ, ಮುಖಂಡರಾದ ಪರಮಾನಂದ ಕುಟರಟ್ಟಿ ಹಾಗೂ ಡಾ. ಡಿ.ಡಿ.ಬೆಳಗಲಿ ಇತರರಿದ್ದರು.