ಆಸ್ಪತ್ರೆ ಮೇಲ್ದರ್ಜೆಗೇರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ವೈದ್ಯಕೀಯ ಸೇವೆಗಳನ್ನು ಕಡಿತಗೊಳಿಸಿರುವ ಕ್ರಮವನ್ನು ಖಂಡಿಸಿ ರೈತ ಸಂಘದ ವತಿಯಿಂದ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ವೈದ್ಯಕೀಯ ಸೇವೆಗಳನ್ನು ಕಡಿತಗೊಳಿಸಿರುವ ಕ್ರಮವನ್ನು ಖಂಡಿಸಿ ರೈತ ಸಂಘದ ವತಿಯಿಂದ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
Published on
ಕೆ.ಎಂ.ದೊಡ್ಡಿ: ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಹಾಗೂ ವೈದ್ಯಕೀಯ ಸೇವೆಗಳನ್ನು ಕಡಿತಗೊಳಿಸಿರುವ ಕ್ರಮ ಖಂಡಿಸಿ ರೈತ ಸಂಘದ ವತಿಯಿಂದ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾ ನಿರತರು ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು, ಈ ಹಿಂದೆ ಇದ್ದ ಹಲವಾರು ವೈದ್ಯಕೀಯ ಸೇವೆಗಳನ್ನು ಕಡಿತಗೊಳಿಸಿ, ಹಲವು ವೈದ್ಯರನ್ನು ಬೇರೆಡೆ ವರ್ಗಾವಣೆ ಮಾಡಿರುವುದರಿಂದ ಆಸ್ಪತ್ರೆಗೆ ಆಗಮಿಸಸುವ ರೋಗಿಗಳಿಗೆ ಸಾಕಷ್ಟು ಸಮಸ್ಯೆ ಉಂಟಾಗಿದ್ದು, ಕೂಡಲೇ ಈ ಬಗ್ಗೆ ಕ್ರಮ ವಹಿಸುವಂತೆ ರೈತರು ಆಗ್ರಹಿಸಿದರು.
ಮಂಡ್ಯ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಕೆ. ರಾಮಲಿಂಗೇಗೌಡ ಮಾತನಾಡಿ, ಪಟ್ಟಣವು ಪ್ರಮುಖ ವಾಣಿಜ್ಯ ಕೇಂದ್ರವಾಗಿ ಬೆಳೆಯುತ್ತಿದ್ದು, ಈ ಭಾಗದಲ್ಲಿ ಪ್ರತಿನಿತ್ಯ ನೂರಾರು ರೋಗಿಗಳು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 25 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ಪಟ್ಟಣದಲ್ಲಿ ಸುಮಾರು 5 ಉಪ ಆರೋಗ್ಯ ಕೇಂದ್ರಗಳನ್ನು ಒಳಗೊಂಡಿದೆ. ಸರ್ಕಾರ ಇಲ್ಲಿನ ತಜ್ಞ ವೈದ್ಯರನ್ನು ಬೇರೆಡೆ ವರ್ಗಾವಣೆ ಮಾಡಿ ಆಸ್ಪತ್ರೆಯನ್ನು ಅವನತಿಯತ್ತ ನೂಕುತ್ತಿದೆ ಎಂದು ಕಿಡಿ ಕಾರಿದರು.
ಮದ್ದೂರು-ಮಳವಳ್ಳಿ ಮುಖ್ಯರಸ್ತೆಯ ಪಕ್ಕದಲ್ಲಿ ಆಸ್ಪತ್ರೆ ಇರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಿತ್ತು. ಸರ್ಕಾರ ಮತ್ತು ಕುಟುಂಬ ಆರೋಗ್ಯ ಕಲ್ಯಾಣ ಇಲಾಖೆ ಹೊಸ ಮಾರ್ಗದರ್ಶಿಯನ್ನು ಹೊರಡಿಸಿ ಸಮುದಾಯ ಆರೋಗ್ಯ ಕೇಂದ್ರವನ್ನು ಕೆಳದರ್ಜೆಗೆ ಇಳಿಸಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಡಲು ಹೊರಟಿರುವ ಕ್ರಮವನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಕೂಡಲೇ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ಹೆಚ್ಚಿನ ವೈದ್ಯಕೀಯ ಸೇವೆಗಳೊಂದಿಗೆ ವೈದ್ಯರನ್ನು ನೇಮಿಸಿ, ಮೂಲಸೌಕರ್ಯಗಳನ್ನು ಒದಗಿಸಬೇಕು. ಹೊಸದಾಗಿ ರೂಪಿಸಿರುವ ನಿಯಮಾವಳಿಗಳನ್ನು ರದ್ದುಪಡಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದೆ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ನಂತರ ಪ್ರತಿಭಟನಾಕಾರರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಜಗದೀಶ್ ಕುಮಾರ್ ಅವರಿಗೆ ಮನವಿ ಸಲ್ಲಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಪ್ರಭುಲಿಂಗು, ಮಳವಳ್ಳಿ ತಾಲೂಕು ಅಧ್ಯಕ್ಷ ಬಸವರಾಜು, ರೈತ ಮುಖಂಡರಾದ ಸೊ.ಶಿ. ಪ್ರಕಾಶ್, ತಾಲೂಕು ಕಾರ್ಯದರ್ಶಿ ಕೆ.ಪಿ. ದೊಡ್ಡಿ ಪುಟ್ಟಸ್ವಾಮಿ, ಮಣಿಗೆರೆ ರಾಮಣ್ಣ, ಬೊಪ್ಪಸಮುದ್ರ ಮಲ್ಲೇಶ್, ಹೊಸಹಳ್ಳಿ ಶಿವಣ್ಣ, ಪ್ರಗತಿಪರ ಸಂಘಟನೆಯ ಕರಡಕೆರೆ ಯೋಗೇಶ್, ಬಿಳಿಗೌಡ, ರಾಮಣ್ಣ ಸೇರಿದಂತೆ ರೈತಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net