ಅಹವಾಲು ನಿಮ್ಮದು, ಪರಿಹಾರ ನಮ್ಮದು: ಸಿ.ಎನ್​. ಶ್ರೀಧರ

ಗದಗ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಜರುಗಿದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಜನರ ಅಹವಾಲು ಆಲಿಸಿದರು. ಸಿ.ಎನ್​. ಶ್ರೀಧರ, ಡಾ. ದುರಗೇಶ ಕೆ.ಆರ್​. ಸಂತೋಷ ಸೇರಿದಂತೆ ಹಲವರು ಇದ್ದರು.
ಗದಗ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಜರುಗಿದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಜನರ ಅಹವಾಲು ಆಲಿಸಿದರು. ಸಿ.ಎನ್​. ಶ್ರೀಧರ, ಡಾ. ದುರಗೇಶ ಕೆ.ಆರ್​. ಸಂತೋಷ ಸೇರಿದಂತೆ ಹಲವರು ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಗದಗ
ಜನಸಾಮಾನ್ಯರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಂಬಂಧಿಸಿದ ಇಲಾಖೆಗಳ ಮೂಲಕ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾ ಸೇವಾ ಇಲಾಖೆಯಿಂದ ಹಮ್ಮಿಕೊಳ್ಳಲಾಗಿರುವ ಪ್ರಜಾ ಸೇವಾ ಅಭಿಯಾನ ಜನ ಸಂಪರ್ಕಜಿಲ್ಲಾ ಮಟ್ಟದ ಸಭೆ ಶನಿವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ ಅವರ ನೇತೃತ್ವದಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ಮಂಡಿಸಿದರು. ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಹವಾಲುಗಳು ಸಲ್ಲಿಕೆಯಾಗಿದ್ದು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಕೆಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು.
ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನಸಾಮಾನ್ಯರ ಬಳಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವುದರ ಜೊತೆಗೆ, ಅವರ ಸಮಸ್ಯೆಗಳನ್ನು ನೇರವಾಗಿ ಅರಿತು ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾ ಸೇವಾ ಅಭಿಯಾನದ ಜನ ಸಂಪರ್ಕ ಸಭೆಯನ್ನು ಜಾರಿಗೆ ತರಲಾಗಿದೆ. ಸಾಮಾನ್ಯವಾಗಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ವಿವಿಧ ಕಚೇರಿಗಳಿಗೆ ತೆರಳಿ ಅಜಿರ್ ಸಲ್ಲಿಸಿ, ಹಲವು ಬಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇರುತ್ತದೆ. ಇದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಅಭಿಯಾನ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರತಿ ಮನೆಗೂ ಅಹವಾಲು ಸಲ್ಲಿಸಲು ಅಜಿರ್ ನಮೂನೆಗಳನ್ನು ನೀಡಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಜಿರ್ ನಮೂನೆಯಲ್ಲಿ ಸ್ಪಷ್ಟವಾಗಿ ನಮೂದಿಸಿ ಸಲ್ಲಿಸಬೇಕು. ಸಾರ್ವಜನಿಕರಿಂದ ಸ್ವೀಕರಿಸುವ ಪ್ರತಿಯೊಂದು ಅಜಿರ್ಯನ್ನು ಸಂಬಂಧಿಸಿದ ಇಲಾಖೆಯ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು. ಅಜಿರ್ಯನ್ನು ಸ್ವೀಕರಿಸಿ ಅಲ್ಲಿಗೇ ಕೈಬಿಡುವ ವ್ಯವಸ್ಥೆ ಇಲ್ಲ. ಪ್ರತಿ ಅಜಿರ್ಯೂ ಸಂಬಂಧಿಸಿದ ಸರ್ಕಾರದ ಹಂತಕ್ಕೆ ಹೋಗಬೇಕು. ಅಜಿರ್ಯ ಕುರಿತು ಕೈಗೊಂಡ ಕ್ರಮ ಹಾಗೂ ಸಮಸ್ಯೆಗೆ ದೊರೆತ ಪರಿಹಾರದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಜನ ಸಂಪರ್ಕ ಸಭೆಯಲ್ಲಿ ಸ್ವೀಕರಿಸಲಾದ ಅಹವಾಲುಗಳ ಮೇಲೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿ ಶನಿವಾರ ಪರಿಶೀಲನೆ ನಡೆಸಲಾಗುವುದು. ಸಮಸ್ಯೆ ಬಗೆಹರಿಯುವವರೆಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಅನುಸರಣೆ ಮಾಡಲಾಗುವುದು. ಹೀಗಾಗಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಅವರು ಹೇಳಿದರು.
ಕೆಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸ್ಪಂದನೆ ನೀಡಲಾಯಿತು. ಇನ್ನು ಕೆಲವು ಸಮಸ್ಯೆಗಳಿಗೆ ಸ್ಥಳ ಪರಿಶೀಲನೆ, ದಾಖಲೆಗಳ ಪರಿಶೀಲನೆ ಹಾಗೂ ಸಂಬಂಧಿಸಿದ ಇಲಾಖೆಯ ಅನುಮತಿ ಅಗತ್ಯವಿರುವ ಹಿನ್ನೆಲೆಯಲ್ಲಿ, ಅವುಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ವಹಿಸಿ ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿತುನ್​ ಎಚ್​.ಎನ್​., ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ, ಜಿಲ್ಲಾ ಪಂಚಾಯತ್​ ಉಪಕಾರ್ಯದಶಿರ್ ಸಿ.ಆರ್​. ಮುಂಡರಗಿ, ಉಪ ವಿಭಾಗಾಧಿಕಾರಿ ಗಂಗಪ್ಪ ಎಂ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net