ತಾಯಿ ಪ್ರೀತಿ ಬೆಲೆ ಕಟ್ಟಲಾಗದು: ಬಸವರಾಜ ಹೊರಟ್ಟಿ

Gadag
Gadag
Published on

ಗದಗ: ತಾಯಿ ಪ್ರೀತಿ ಬೆಲೆ ಕಟ್ಟಲಾಗದು. ಹೀಗಾಗಿ ಪ್ರತಿಯೊಬ್ಬರೂ ತಮ್ಮ ತಂದೆ-ತಾಯಿಯನ್ನು ಪ್ರೀತಿ, ವಾತ್ಸಲ್ಯದಿಂದ ನೋಡಿಕೊಳ್ಳಿ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದ ಹೊರವಲಯದಲ್ಲಿ ಗ್ರಾಮ ಗಂಗೋತ್ರಿ ಆವರಣದಲ್ಲಿರುವ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದಲ್ಲಿ ಅವ್ವ ಸೇವಾ ಟ್ರಸ್ಟ್ ಮಾತೋಶ್ರೀ ಗಂಗವ್ವ ಶಿವಲಿಂಗಪ್ಪ ಹೊರಟ್ಟಿ ಸ್ಮರಣಾರ್ಥ ರಾಜ್ಯ ಮಟ್ಟದಲ್ಲಿ ಮಹಿಳಾ ಪತ್ರಕರ್ತರಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸ್ಥಾಪಿಸಿರುವ ‘ದತ್ತಿ ನಿಧಿ’ ಪ್ರಶಸ್ತಿ ಪ್ರದಾನ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಪತ್ರಿಕೋದ್ಯಮದ ಪಾತ್ರ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರು ಪತ್ರಿಕೆಗಳ ಮೂಲಕ ಸಮಾಜದಲ್ಲಿ ಪರಿಣಾಮ ಬೀರುತ್ತಾರೆ. ಹೀಗಾಗಿ ಪತ್ರಿಕೆಗಳ ವರದಿ, ಮಾಹಿತಿ ಹಾಗೂ ಸಮಾಜದಲ್ಲಿ ಅತ್ಯುತ್ತಮ ಸೇವೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದೆ. ಇದಕ್ಕೊಂದು ಪ್ರತ್ಯೇಕ ಸಮಿತಿ ರಚಿಸಿದ್ದೇವೆ. ನಮ್ಮ ತಾಯಿಯ ಸ್ಮರಣೆಯ ಹಿನ್ನೆಲೆಯಲ್ಲಿ ಪ್ರತಿವರ್ಷ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.
ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಮಾತನಾಡಿ, ಅವ್ವನ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ರಾಜ್ಯಕ್ಕೆ ಮಾದರಿಯಾಗಿದೆ. ಎಷ್ಟೇ ದೊಡ್ಡ ಸ್ಥಾನಕ್ಕೇರಲಿ ತಾಯಿಗಿಂತ ದೊಡ್ಡದು ಯಾವುದೂ ಇಲ್ಲ. "ಅವ್ವ " ನಮ್ಮೆಲ್ಲರ ಸಾಧನೆ, ಯಶಸ್ಸಿಗೆ ಸ್ಫೂರ್ತಿ ಎಂದು ಹೇಳಿದರು.
ಅಧ್ಯಕ್ಷತೆವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗದಗ ಜಿಲ್ಲಾಧ್ಯಕ್ಷ ರಾಜು ಎಂ. ಹೆಬ್ಬಳ್ಳಿ ಅವರು ಮಾತನಾಡಿ, ಸಚಿವರಾದ ಎಚ್.ಕೆ. ಪಾಟೀಲ ಅವರು ಗದಗನಲ್ಲಿ ಕರ್ನಾಟಕದಲ್ಲಿಯೇ ಮಾದರಿ ಎನ್ನುವ ರೀತಿ ಪತ್ರಿಕಾ ಭವನ ನಿರ್ಮಾಣ ಮಾಡಿದ್ದಾರೆ. ಇದೀಗ ಮೊದಲ ಮಹಡಿಗೆ ಸಭಾಪತಿಗಳು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ಮತ್ತು ಕೆ.ವಿ. ಪ್ರಭಾಕರ ಅವರು ಮುಖ್ಯಮಂತ್ರಿಗಳ ಮೂಲಕ ವಿಶೇಷ ಅನುದಾನ ಕೊಡಿಸುವುದರ ಜತೆಗೆ ಜಿಲ್ಲೆಯ ಕ್ಷೇಮಾಭಿವೃದ್ಧಿ ನಿಧಿಗೆ ಅನುದಾನ ಕೊಡಿಸುವಂತೆ ಮನವಿ ಮಾಡಿದರು.
ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕುಲಪತಿ (ಪ್ರ) ಹಾಗೂ ಕುಲಸಚಿವ ಪ್ರೊ.ಸುರೇಶ ನಾಡಗೌಡರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಬಿ.ಬಿ ಅಸೂಟಿ, ಅವ್ವ ಸೇವಾ ಟ್ರಸ್ಟ ಜಿಲ್ಲಾ ಸಂಚಾಲಕ ಬಸವರಾಜ ಧಾರವಾಡ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರು, ಕಾ.ನಿ.ಪ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಅರುಣಕುಮಾರ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ ಸೇರಿದಂತೆ ಸಂಘದ ಪದಾಧಿಕಾರಿಗಳು, ಜಿಲ್ಲೆಯ ಪತ್ರಕರ್ತರು, ವಿದ್ಯಾರ್ಥಿಗಳು ಇದ್ದರು.
===
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗದಗ ಜಿಲ್ಲಾ ಘಟಕದ ಪತ್ರಿಕಾ ಭವನದ ಮೊದಲ ಮಹಡಿಗೆ ಐದು ಲಕ್ಷ ರೂ. ಅನುದಾನ ನೀಡಲಾಗುವುದು.
-ಬಸವರಾಜ ಹೊರಟ್ಟಿ, ಸಭಾಪತಿ

====
ತನುಜಾ ನಾಯಕಗೆ ‘ದತ್ತಿ ನಿಧಿ’ ಪ್ರಶಸ್ತಿ
ಗದಗ: ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಸ್ಮರಣಾರ್ಥ ಸ್ಥಾಪಿಸಿರುವ ದತ್ತಿ ನಿಧಿಯ 2025-26ನೇ ಸಾಲಿನ ಪ್ರಶಸ್ತಿಗೆ 'ಸಂಯುಕ್ತ ಕರ್ನಾಟಕ' ಪತ್ರಿಕೆಯ ಹಿರಿಯ ಉಪಸಂಪಾದಕಿ ತನುಜಾ ನಾಯಕ ಅವರಿಗೆ ನೀಡಿ, ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net