ಕುಟುಂಬದ ಮುಖ್ಯಸ್ಥರ ಹೆಸರು 2002ರ ಮತದಾರರ ಪಟ್ಟಿಯಲ್ಲಿದ್ದರೆ, ಹೊಸದಾಗಿ ಅರ್ಹತೆ ಪಡೆಯುವ ಕುಟುಂಬದ ಇತರೆ ಸದಸ್ಯರ ಹೆಸರನ್ನು ಸೇರ್ಪಡೆ ಮಾಡುವುದು ಸುಲಭವಾಗುತ್ತದೆ. ಮದುವೆಯಾಗಿ ಅಥವಾ ವಲಸೆ ಬಂದು ಇಲ್ಲಿ ನೆಲೆಸಿರುವವರ ಹೆಸರು ಹಳೆಯ ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ ಅವರಿಗೆ ಫ್ಯಾಮಿಲಿ ಲಿಂಕೇಜ್ ಸಿಗುವುದಿಲ್ಲ. ಈ ಹಿಂದೆ ಅವರು ವಾಸವಾಗಿದ್ದ ಸ್ಥಳದಲ್ಲಿನ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದ್ದರೆ, ಆ ಮಾಹಿತಿ ಅನುಸಾರ ಹೆಸರು ಸೇರ್ಪಡೆ ಮಾಡಬಹುದು. ಮ್ಯಾಪಿಂಗ್ ಆಗದೆ ಇರುವವರು ಮನೆ ಗಣತಿ ಫಾರಂ ಜೊತೆ ಚುನಾವಣಾ ಆಯೋಗ ನಿಗದಿಪಡಿಸಿದ ಕೇಂದ್ರ ಅಥವಾ ರಾಜ್ಯ ಸರ್ಕಾರದ ಗುರುತಿನ ಚೀಟಿ, ಪಿಂಚಣಿ ಆದೇಶ ಅಥವಾ ಗುರುತಿನ ಚೀಟಿ, ಜು.1 1987ಕ್ಕಿಂತ ಮೊದಲು ಭಾರತದಲ್ಲಿ ಸರ್ಕಾರಿ, ಸ್ಥಳಿಯ ಪ್ರಾಧಿಕಾರ, ಬ್ಯಾಂಕ್,ಅಂಚೆ ಕಚೇರಿ, ಎಲ್ಐಸಿ ಉದ್ಯಮಗಳಿಂದ ನೀಡಲಾದ ಯಾವುದೇ ಗುರುತಿನ ಚೀಟಿ, ಪ್ರಮಾಣ ಪತ್ರ ಅಥವಾ ದಾಖಲೆ, ಜನನ ಪ್ರಮಾಣ ಪತ್ರ, ಪಾಸ್ಪೋರ್ಟ, ಶೈಕ್ಷಣಿಕ ಪ್ರಮಾಣ ಪತ್ರ, ಶಾಶ್ವತ ನಿವಾಸ ಪ್ರಮಾಣ ಪತ್ರ, ಅರಣ್ಯ ಹಕ್ಕು ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ರಾಷ್ಟ್ರಿಯ ನಾಗರಿಕರ ನೋಂದಣಿ, ಕುಟುಂಬ ನೊಂದಣಿ, ಭೂಮಿ ಮನೆ ಹಂಚಿಕೆ ಪ್ರಮಾಣ ಪತ್ರ ಸಲ್ಲಿಸಬಹುದು. ಇದರೊಂದಿಗೆ ಆಧಾರ್ ಕಾರ್ಡನ್ನು ಗುರುತಿನ ಪುರಾವೆಯಾಗಿ ಮಾತ್ರ ನೀಡಬಹುದು. ಇವುಗಳನ್ನು ಪಡೆದು ಮತಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದರು.