ಗುರುವಾರ ಯವನಿಕಾ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಹಾಜರಾತಿ ಕೊರತೆ ಎದುರಿಸಲಿದ್ದು, ಶೇ.50 ಹಾಜರಾತಿ ಇದ್ದರೂ ಪರೀಕ್ಷೆ ಬರೆಯಲು ಅವಕಾಶ ನೀಡುವ ಉದ್ದೇಶದಿಂದ ಒಟ್ಟು 34 ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ ನೀಡಲಾಗಿದೆ. ಇದರ ಅನುಷ್ಠಾನಕ್ಕೆ ಸರ್ಕಾರ ಆದೇಶವನ್ನೂ ಹೊರಡಿಸಿದೆ ಎಂದರು. ಕಳೆದ ಎರಡು ವರ್ಷದಿಂದ ಏಕಲವ್ಯ, ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಜೀವಮಾನ ಸಾಧನೆ ಪ್ರಶಸ್ತಿಗಳನ್ನು ನೀಡಿಲ್ಲ. ಈ ಪ್ರಶಸ್ತಿಗಳನ್ನು ಹಾಕಿ ಮಾಂತ್ರಿಕ ಧ್ಯಾನ್‌ಚಂದ್ ಅವರ ಜನ್ಮದಿನವೂ ಆಗಿರುವ ಆಗಸ್ಟ್ 29ರಂದು ವಿತರಿಸಲಾಗುವುದು ಎಂದು ಖಚಿತಪಡಿಸಿದರು.