ಮನೆ ಬಾಗಿಲಿಗೆ ಸರ್ಕಾರಿ ಸೇವೆ

ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. ಕೆ.ಎಂ.ಉದಯ್, ಡಾ.ಕುಮಾರ್, ಮನೋಜ್‌ಕುಮಾರ್ ಮೀನಾ, ಕೆ.ಆರ್.ನಂದಿನಿ ಇದ್ದರು.
ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. ಕೆ.ಎಂ.ಉದಯ್, ಡಾ.ಕುಮಾರ್, ಮನೋಜ್‌ಕುಮಾರ್ ಮೀನಾ, ಕೆ.ಆರ್.ನಂದಿನಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ
  • ತಾಲೂಕು ಕ್ರೀಡಾಂಗಣ
ಮದ್ದೂರು: ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ’ಪ್ರಜಾಸೇವೆ’ ಆಂದೋಲನವನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಜಿಲ್ಲಾ ’ಪ್ರಜಾಸೇವೆ’ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದು 90 ದಿನಗಳು ಪೂರ್ಣಗೊಂಡಿದ್ದು, ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸುವ ಉದ್ದೇಶದಿಂದ ’ಪ್ರಜಾ ಸೇವೆ’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಈ ರೀತಿಯ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕಾಳಜಿಯಿಂದ ರೂಪುಗೊಂಡಿರುವ ’ಪ್ರಜಾ ಸೇವೆ’ ವ್ಯವಸ್ಥೆಯಡಿ ಐಎಎಸ್ ದರ್ಜೆಯ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಜಿಲ್ಲಾ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ಸಾರ್ವಜನಿಕರ ಕುಂದು-ಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಲಿದ್ದಾರೆ ಎಂದು ತಿಳಿಸಿದರು.
ಮೂರು ವರ್ಷಗಳಿಂದ ಸಾರ್ವಜನಿಕರೊಂದಿಗೆ ನಿರಂತರವಾಗಿ ಸಭೆ ನಡೆಸಿ ಅಹವಾಲು ಸ್ವೀಕರಿಸಲಾಗುತ್ತಿದ್ದರೂ ಅರ್ಜಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಸಾರ್ವಜನಿಕರು ತಮ್ಮ ಅರ್ಜಿಗಳನ್ನು ಹಿಡಿದು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರತ್ಯೇಕ ವ್ಯವಸ್ಥೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ಸುಮಾರು 24 ಸಾವಿರ ಸಾರ್ವಜನಿಕ ಅಹವಾಲುಗಳನ್ನು ಪರಿಹರಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸುಮಾರು 1,500 ಕೋಟಿ ರೂ. ವೆಚ್ಚ ಮಾಡಲಾಗಿದೆ. ಮಕ್ಕಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ರೈತರಿಗೆ ಶೇ.50 ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ಮದ್ದೂರು ಪಟ್ಟಣದಲ್ಲಿ ಸುಮಾರು 137 ಕೋಟಿ ರೂ. ವೆಚ್ಚದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಜನರ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ’ಪ್ರಜಾ ಸೇವೆ’ ಆಂದೋಲನ ನಡೆಸಲಾಗುವುದು. ಅಧಿಕಾರಿಗಳು ಅರ್ಜಿಗಳನ್ನು ಕಾನೂನುಬದ್ಧವಾಗಿ ಸಾಧ್ಯವಿರುವ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಾರ್ವಜನಿಕರು ಅರ್ಜಿಯಲ್ಲಿ ತಮ್ಮ ಸಮಸ್ಯೆಯ ಸಂಪೂರ್ಣ ವಿವರ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸರ್ಕಾರ ಬದ್ಧವಾಗಿದೆ. ಕಾನೂನುಬದ್ಧವಾಗಿ ರೈತರ ಪರವಾಗಿ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಮಾತನಾಡಿ, ಗ್ರಾಮೀಣ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಹಾಗೂ ಅವರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ’ಪ್ರಜಾ ಸೇವೆ’ ಜಾರಿಗೆ ತರಲಾಗಿದೆ ಎಂದರು.
ಜನರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಸಾರ್ವಜನಿಕರು ಹಾಗೂ ರೈತರಿಂದ ಕುಂದು-ಕೊರತೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ಅಧಿಕಾರಿಗಳು ಕ್ರಮ ಕೈಗೊಂಡರು. ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net