Govind Karjol | ಸರ್ಕಾರದ ಖಜಾನೆ ಖಾಲಿ! ಅಭಿವೃದ್ಧಿಗೆ ದುಡ್ಡಿಲ್ಲ, ಭ್ರಷ್ಟಾಚಾರ ನಿಂತಿಲ್ಲ, ನ.23 ರಿಂದ ರಾಜ್ಯಾದ್ಯಂತ ಬಿಜೆಪಿ ಹೋರಾಟ: ಗೋವಿಂದ ಕಾರಜೋಳ

Karnataka BJP statewide protest announcement by MP Govind Karjol
ಕರ್ನಾಟಕದಲ್ಲಿ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಿದೆ ಎಂದು ಸಂಸದ ಗೋವಿಂದ ಕಾರಜೋಳ ಘೋಷಿಸಿದ್ದಾರೆ.
Published on: 

ಹುಬ್ಬಳ್ಳಿ: ರಾಜ್ಯದ ಕಾಂಗ್ರೆಸ್ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ಬೆಲೆ ಏರಿಕೆ ಹಾಗೂ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನವೆಂಬರ್ 23 ರಿಂದ 25 ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ಮಂಡಲ ಮಟ್ಟದಲ್ಲಿ ಬಿಜೆಪಿ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ (ನ.21) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಬಡವರಿಗೆ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಅಭಿವೃದ್ಧಿಗೆ ಒಂದೇ ಒಂದು ರೂಪಾಯಿ ಖರ್ಚು ಮಾಡಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಈ ಕುರಿತು ಸ್ವಪಕ್ಷದವರು ಹಾಗೂ ಗುತ್ತಿಗೆದಾರರ ಸಂಘದವರೇ ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. 3,500 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉದ್ಯೋಗಾವಕಾಶಗಳಿಲ್ಲದೆ ಜನರು ವಲಸೆ ಹೋಗುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ 17 ಲಕ್ಷಕ್ಕೂ ಅಧಿಕ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜಾನುವಾರುಗಳನ್ನು ಸಾಕಲು ಸಾಧ್ಯವಾಗದೆ ರೈತರು ಮಾರಾಟ ಮಾಡುತ್ತಿದ್ದಾರೆ. ಇಂತಹ ದುಸ್ಥಿತಿಯನ್ನು ಹಿಂದೆಂದೂ ಕಂಡಿರಲಿಲ್ಲ.

ಬರಗಾಲದ ಸಂದರ್ಭದಲ್ಲಿ ರೈತರಿಗೆ 2,500 ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದ ಸರ್ಕಾರ ಈವರೆಗೂ ಹಣ ಬಿಡುಗಡೆ ಮಾಡಿಲ್ಲ. ಸರ್ಕಾರದ ಖಜಾನೆ ಖಾಲಿಯಾಗಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವವರೇ ಇಲ್ಲದಂತಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಜನರಿಗೆ, ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಹೀಗಾಗಿ ನೆವೆಂಬರ್​ 23 ರಿಂದ 25 ರ ವರೆಗೆ ಬಿಜೆಪಿ ರಾಜ್ಯ ಕಾಂಗ್ರೆಸ್​​ ಸರ್ಕಾರದ ವಿರುದ್ಧ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಗೋವಿಂದ್​ ಕಾರಜೋಳ ತಿಳಿಸಿದ್ದಾರೆ.